ಬೆಂಗಳೂರು/ನವದೆಹಲಿ: ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ದೆಹಲಿ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ ದೆಹಲಿಗೆ ಬಂದಿದ್ದೇನೆ, ಈ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತ ಮಾತುಕತೆ ಸಾಧ್ಯತೆ ಕಡಿಮೆ ಇದೆ. ಸದ್ಯ ಕೇಂದ್ರದ ಯಾವುದೇ ಸಚಿವರನ್ನೂ ಭೇಟಿಯಾಗಿಲ್ಲ. ಈ ಪ್ರವಾಸದ ವೇಳೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಿಲ್ಲ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆ ಬಿಬಿಎಂಪಿಯು 23 ಕೋಟಿ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿದ್ದ ರಸ್ತೆಗಳು ಹಾಳಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅದು ನನ್ನ ಗಮನಕ್ಕೆ ಬಂದಿಲ್ಲ. ಯಾವ ರಸ್ತೆಗಳು ಆ ರೀತಿ ಹಾಳಾಗಿವೆ ಎನ್ನುವ ಮಾಹಿತಿ ನೀಡಿದರೆ ಅವುಗಳ ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದರು.