ಕರ್ನಾಟಕ

karnataka

ETV Bharat / state

ಕೇಂದ್ರಕ್ಕೆ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿದ್ದೇನೆ : ದೆಹಲಿಯಲ್ಲಿ ಸಿಎಂ ಹೇಳಿಕೆ

ನವದೆಹಲಿಯಲ್ಲಿ ನಡೆಸಲಾದ ಸಂಸದರ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರ ನೇತೃತ್ವದಲ್ಲಿ ಬಜೆಟ್​​ನಲ್ಲಿ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದರು..

cm-basavaraj-bommai-press-meet-after-meeting-with-mps
ಕೇಂದ್ರಕ್ಕೆ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಸಂಸದರೊಂದಿಗೆ ಚರ್ಚಿಸಿದ್ದೇನೆ: ದೆಹಲಿಯಲ್ಲಿ ಸಿಎಂ ಹೇಳಿಕೆ

By

Published : Feb 7, 2022, 8:45 PM IST

Updated : Feb 7, 2022, 9:43 PM IST

ನವದೆಹಲಿ/ಬೆಂಗಳೂರು :ಕೇಂದ್ರಕ್ಕೆ ಸಂಬಂಧಿಸಿದಂತೆ ರಾಜ್ಯದ ನೀರಾವರಿ, ರೈಲ್ವೆ, ನಗರಾಭಿವೃದ್ಧಿ, ಬಂದರು, ರಸ್ತೆ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಸದರ ಸಭೆಯಲ್ಲಿ ಚರ್ಚೆಯಾಗಿದೆ. ಕೇಂದ್ರದಲ್ಲಿ ಯಾವ ವಿಷಯಗಳನ್ನು ಪ್ರಸ್ತಾಪ ಮಾಡಬೇಕೆನ್ನುವ ವಿಚಾರಗಳ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ನಡೆಸಲಾದ ಸಂಸದರ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವರ ನೇತೃತ್ವದಲ್ಲಿ ಬಜೆಟ್​​ನಲ್ಲಿ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಮಂಜೂರಾತಿ ದೊರೆತಿರುವ ಯೋಜನೆಗಳನ್ನು ಸಂಪೂರ್ಣವಾಗಿ ರಾಜ್ಯಕ್ಕೆ ಒದಗಿಸಿಕೊಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದರು.

ವಿತ್ತ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ 1 ಲಕ್ಷ ಕೋಟಿ ರೂ.ಗಳ ಬಂಡವಾಳ ಅನುದಾನದಲ್ಲಿ 50 ವರ್ಷಗಳ ಅವಧಿಗೆ ಬಡ್ಡಿರಹಿತವಾಗಿ ಒಂದು ಲಕ್ಷ ಕೋಟಿ ರೂ.ಗಳನ್ನು ರಾಜ್ಯಕ್ಕೆ ಸಾಲದ ರೂಪದಲ್ಲಿ ನೀಡಬೇಕೆನ್ನುವ ಬಗ್ಗೆ ಚರ್ಚೆಯಾಗಿದೆ. ಕರ್ನಾಟಕಕ್ಕೆ ಎಷ್ಟು ಬರಬೇಕೆನ್ನುವುದು ಚರ್ಚೆಯಾಗಿ ಸುಮಾರು 3,800 ರಿಂದ 4,000 ಕೋಟಿ ರೂ.ಗಳು ದೊರೆಯಬಹುದೆಂಬ ಅಂದಾಜಿದೆ ಎಂದು ಹೇಳಿದರು.

ಅಸದ

ಎಸ್ಕಾಂಗಳಿಗೆ ಸಾಲ ಷರತ್ತುಗಳನ್ನು ಕೈಬಿಡಲು ಕೇಂದ್ರಕ್ಕೆ ಮನವಿ :ಎಸ್ಕಾಂಗಳಿಗೆ ಸಾಲ ಪಡೆಯಲು ವಿಧಿಸಿರುವ ಕೆಲವು ಷರತ್ತುಗಳನ್ನು ಕೈಬಿಡುವಂತೆ ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಎಸ್ಕಾಂಗಳಿಗೆ ಸಹಾಯಧನ, ಅಂತರ ಇಲಾಖಾ ಬಿಲ್​​ಗಳನ್ನು ಕೊಡಬೇಕೆನ್ನುವ ಷರತ್ತುಗಳನ್ನು ವಿಧಿಸಲಾಗಿದೆ. ಒಂದೇ ವರ್ಷಕ್ಕೆ ಇಷ್ಟು ಷರತ್ತುಗಳನ್ನು ಹಾಕದಿರುವಂತೆ ಮನವಿ ಮಾಡಲಾಗಿದೆ. ಅವುಗಳನ್ನು ಮನ್ನಾ ಮಾಡಿದರೆ ಎಸ್ಕಾಂಗಳಿಗೆ ಬ್ಯಾಂಕ್​​ನಿಂದ ಹಣ ದೊರೆಯಲಿದೆ. ಕರ್ನಾಟಕ ಪವರ್ ಜನರೇಷನ್ ಕಂಪನಿಗೆ ಈ ಮೊತ್ತವನ್ನು ಪಾವತಿಸಬಹುದು. ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಕೆಲವು ಸ್ಪಷ್ಟೀಕರಣಗಳ ಅಗತ್ಯವಿದೆ ಎಂದಿದ್ದಾರೆ.

ಅಧಿಕಾರಿಗಳೊಂದಿಗಿನ ಸಭೆಯ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮದು ಅತಿ ಹೆಚ್ವು ಇಂಧನ ಸಹಾಯಧನ ನೀಡುವ ರಾಜ್ಯವಾಗಿದೆ. 15,000 ಕೋಟಿ ರೂ.ಗಳ ಸಹಾಯಧನವನ್ನು ಕರ್ನಾಟಕ ಒದಗಿಸುತ್ತದೆ. ಅದಕ್ಕೆ ಹಿಂದಿನ ವರ್ಷಗಳ ಬಾಕಿ ಮೊತ್ತವನ್ನು ನೀಡಲು ಸಮಯಾವಕಾಶದ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದರು.

ಇಂಧನ ಕ್ಷೇತ್ರದಲ್ಲಿ 4 % ವಿತ್ತೀಯ ಕೊರತೆಗೆ ಅನುಮತಿ ನೀಡಿದ್ದು, ಶೇ. 0.5ರಷ್ಟು ಇಂಧನ ಕ್ಷೇತ್ರಕ್ಕೆ ಮೀಸಲಿಡಲು ಸೂಚನೆ ನೀಡಿದ್ದು, ಇಂಧನ ಕ್ಷೇತ್ರದ ಸುಧಾರಣೆಗಾಗಿ ಈ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ಸಚಿವರು ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರೇಕುಗಳ ಸರಬರಾಜಿಗೆ ರೈಲ್ವೆ ಸಚಿವರಿಗೆ ಮನವಿ:ಕಲ್ಲಿದ್ದಲು ಸಾಗಾಣಿಕೆಗೆ ಅಗತ್ಯವಿರುವ ರೇಕುಗಳ ಸರಬರಾಜಿನ ಕುರಿತು ಚರ್ಚಿಸಲಾಗಿದೆ. ಈ ಬಗ್ಗೆ ರೈಲ್ವೆ ಮಂಡಳಿಯಲ್ಲಿ ಸಂಬಂಧಿಸಿದವರಿಗೆ ಸೂಚನೆ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮದವರಿಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿರುವುದು..

ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗಳು ರೈಲ್ವೆ ಮಂಡಳಿ ಅಧ್ಯಕ್ಷರೊಂದಿಗೆ ಮಾತನಾಡಲಿದ್ದಾರೆ ಎಂದು ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕೇಂದ್ರ ಯೋಜನೆಗಳ ಅನುಷ್ಠಾನ ವಿಳಂಬವಾಗುತ್ತಿದೆ. ರಸ್ತೆ ಮತ್ತು ರೈಲ್ವೆ ಯೋಜನೆಗಳಲ್ಲಿ ತೆರಿಗೆ ವಿನಾಯ್ತಿ ಹಾಗೂ ಅನುಮೋದನೆಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಎಸ್​ಟಿಆರ್​​ಆರ್ ರಸ್ತೆಗಳಿಗೆ ಜಿಎಸ್​ಟಿ ವಿನಾಯ್ತಿ ನೀಡಲು ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ:ಕಲ್ಯಾಣ ಕರ್ನಾಟಕಕ್ಕೆ 5030 ಕೋಟಿ ರೂ. ಅನುದಾನ ನೀಡಿ : ನಿರ್ಮಲಾ ಸೀತಾರಾಮನ್​ಗೆ ಸಿಎಂ ಮನವಿ

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ 50:50 ಪಾಲುದಾರಿಕೆಯಲ್ಲಿ ರೈಲ್ವೆ ಯೋಜನೆಗಳು ಅನುಷ್ಠಾನಗೊಳ್ಳುತ್ತವೆ. ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ ಒಂದೇ ವರ್ಷ ಸಂಪೂರ್ಣ ಹಣ ಬಿಡುಗಡೆ ಮಾಡಲಾಗುವುದಿಲ್ಲ.

ಆದ್ಯತೆ ಆಧಾರದ ಮೇಲೆ ಹಣ ಬಿಡುಗಡೆ ನಿಗದಿಪಡಿಸಿಕೊಳ್ಳಲಾಗಿದೆ. ಕೆಲವು ರೈಲ್ವೆ ಯೋಜನೆಗಳಲ್ಲಿ ಹಣ ಬಿಡುಗಡೆಯಾಗಿದ್ದರೂ ಭೂ ಸ್ವಾಧೀನದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದಲ್ಲಿ ಮಂಜೂರಾತಿ ದೊರೆತು ಅನುದಾನ ಬಿಡುಗಡೆಯಾಗಿರುವ ಪ್ರಮುಖ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರವೂ ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆಯನ್ನು ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ಆರೋಗ್ಯ ಮೂಲಸೌಕರ್ಯಕ್ಕೆ ಅನುದಾನ :ಆರೋಗ್ಯ ಸಚಿವರನ್ನು ಭೇಟಿಯಾಗಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮಾತುಕತೆ ನಡೆಸಲಾಗಿದೆ. ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರಕ್ಕೆ ಒದಗಿಸಲು ಮನವಿ ಮಾಡಲಾಗಿದ್ದು, ಅವರು ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Last Updated : Feb 7, 2022, 9:43 PM IST

ABOUT THE AUTHOR

...view details