ನವದೆಹಲಿ/ಬೆಂಗಳೂರು: ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದರು. ಅಲ್ಲಿ ಅವರು ಮೇಕೆದಾಟು ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು. ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ.
ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರಧಾನಿಗೂ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಯೋಜನೆ ಜಾರಿಗೆ ಕೇಂದ್ರದಿಂದ ಅಗತ್ಯ ಸಹಕಾರ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು, ಮಹಾದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮತ್ತು ಇತರ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರು.
ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಪ್ರಹ್ಲಾದ್ ಜೋಶಿ ಮಾತುಕತೆ ಯೋಜನೆಗಳ ಜಾರಿಗೆ ಇರುವಂತಹ ಅಡೆತಡೆ, ಆಡಳಿತಾತ್ಮಕ ಸಮಸ್ಯೆ ಮತ್ತು ತಾಂತ್ರಿಕ ಕೆಲಸಗಳ ಬಗ್ಗೆ ಮಾತುಕತೆ ನಡೆಸಿದರು. ಆದಷ್ಟು ನಿರ್ದಿಷ್ಟ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ, ಸಚಿವರಾದ ಗೋವಿಂದ ಕಾರಜೋಳ, ವಿ. ಸುನೀಲ್ ಕುಮಾರ್, ಮುರುಗೇಶ್ ನಿರಾಣಿ, ಸಂಸದ ಪ್ರತಾಪ ಸಿಂಹ, ಶಿವಕುಮಾರ್ ಉದಾಸಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಉಪಸ್ಥಿತರಿದ್ದರು.
ಇಂಧನ ಸಚಿವರ ಭೇಟಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಇಂಧನ ಸಚಿವ ಆರ್. ಕೆ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜ್ಯದ ವಿದ್ಯುತ್ ಬೇಡಿಕೆ, ಪೂರೈಕೆ ಸ್ಥಿತಿಗತಿ, ಕೇಂದ್ರ ಗ್ರಿಡ್ ನಿಂದ ರಾಜ್ಯಕ್ಕೆ ಬರಬೇಕಿರುವ ಪಾಲಿನ ಕುರಿತು ಮಾತುಕತೆ ನಡೆಸಿದರು. ಈ ವರ್ಷ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದ್ದು, ಗ್ರಿಡ್ ನಿಂದ ಹೆಚ್ಚುವರಿ ವಿದ್ಯುತ್ ಪೂರೈಸುವಂತೆ ಮನವಿ ಮಾಡಿದರು.
ಓದಿ:ಆಜಾನ್ ವಿರುದ್ಧ ಕಿಡಿ..ಕಮಿಷನರ್ ಪಂತ್ಗೆ ದೂರು ನೀಡಿದ ಸಂಬರಗಿ ನೇತೃತ್ವದ ನಿಯೋಗ