ಬೆಂಗಳೂರು:ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆದ ನಂತರ ಅವರು ನಾಲ್ಕನೇ ಬಾರಿಗೆ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಅಕ್ಟೋಬರ್ 8ರಂದು ನವದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಲಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸಕ್ಕೆ ನಿರ್ಧರಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಅರುಣ್ ಸಿಂಗ್ ಸಮಯ ಲಭ್ಯವಾಗಿದ್ದು, ಜೆ.ಪಿ. ನಡ್ಡಾ ಭೇಟಿಗೆ ಸಮಯ ನಿಗದಿಯಾಗಬೇಕಿದೆ.
ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಈಗಾಗಲೇ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿರುವ ಸಿಎಂ ಬೊಮ್ಮಾಯಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯೊಂದಿಗೆ ನವದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ನಡೆಯುತ್ತಿರುವ ಮೊದಲ ಉಪ ಚುನಾವಣೆ ಇದಾಗಿದೆ.