ಬೆಂಗಳೂರು:ಹೈದರಾಬಾದ್ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಿಂದ ವಾಪಸ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಫುಲ್ ಆಕ್ಟೀವ್ ಆಗಿದ್ದು, ಸರಣಿ ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಹೊಸ ಉದ್ಯೋಗ ನೀತಿ ಕುರಿತ ಸಭೆ ನಡೆಯಿತು. ಸಭೆಯಲ್ಲಿ ಐಟಿ, ಬಿಟಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಎಸ್.ಶ್ರೀಕರ, ಹಿರಿಯ ಅಧಿಕಾರಿ ಸೆಲ್ವ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.
ನಂತರ ಪೆಟ್ರೋನಾಸ್ ಹೈಡ್ರೋಜನ್ ಕಂಪೆನಿಯು ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು. ಜೊತೆಗೆ ಕಾಂಟಿನೆಂಟಲ್ ಆಟೋಮೋಟಿವ್ಸ್ ಇಂಡಿಯಾ ಪ್ರೈ.ಲಿ.ಕಂಪನಿಯು ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು.