ಬೆಂಗಳೂರು: ಜನವರಿ 19ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಮಾರ್ಗಸೂಚಿ ಜಾರಿಯಲ್ಲಿದ್ದು, ಅದನ್ನು ತಿಂಗಳಾಂತ್ಯದವರೆಗೂ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧಿಕಾರಿಗಳು ಹಾಗು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿದರು. ಈ ವೇೆಳೆ, ಸದ್ಯ ರಾಜ್ಯದಲ್ಲಿ ಕೈಗೊಂಡಿರುವ ಕಠಿಣ ನಿರ್ಬಂಧಗಳನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಕುರಿತು ಸಮಾಲೋಚನೆ ನಡೆಸಲಾಯಿತು. ಕೆಲವೊಂದು ಹೆಚ್ಚುವರಿ ನಿರ್ಬಂಧ ಸೇರಿಸಿ ಮಾರ್ಗಸೂಚಿಯನ್ನು ಜನವರಿ ಅಂತ್ಯದವರೆಗೂ ವಿಸ್ತರಣೆ ಮಾಡುವ ಮಹತ್ವದ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಸಭೆಯಲ್ಲಿ ಕೈಗೊಂಡ ನಿರ್ಧಾರಗಳು:
1. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳು ಈ ತಿಂಗಳ ಅಂತ್ಯದವರೆಗೆ ವಿಸ್ತರಣೆ.
2. ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ವರದಿ ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ.
3. ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚನೆ.
4. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.
5. ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚನೆ.
6. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ.
7. ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಒದಗಿಸಬೇಕು.