ಬೆಂಗಳೂರು: ಒಮಿಕ್ರೋನ್ ಭೀತಿ ಹಿನ್ನಲೆ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಂಸತ್ ಭವನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಜ್ಯದಲ್ಲಿ ಫ್ರೆಂಟ್ ಲೈನ್ ವಾರಿಯರ್ಸ್ಗೆ 3ನೇ ಡೋಸ್ ಅಥವಾ ಬೂಸ್ಟರ್ ಡೋಸ್ ನೀಡಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ ಕೇಂದ್ರ ಸಚಿವರ ಗಮನ ಸೆಳೆದರು. ಈಗಾಗಲೇ, ಕೋವಿಶೀಲ್ಡ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಪರಿಗಣಿಸಬೇಕು ಎಂದು ಸೀರಂ ಇನ್ಸಿಟಿಟ್ಯೂಟ್ ಐಸಿಎಂಆರ್ಗೆ ಮನವಿ ಮಾಡಿರುವ ಬೆನ್ನಲ್ಲೇ ಸಿಎಂ ಕೇಂದ್ರ ಆರೋಗ್ಯ ಸಚಿವರ ಮುಂದೆ ಬೂಸ್ಟರ್ ಡೋಸ್ ಬಗ್ಗೆ ಪ್ರಸ್ತಾಪ ಮಾಡಿದ್ದು, ಬಹುತೇಕ ಕೋವಿಶೀಲ್ಡ್ ಲಸಿಕೆಯನ್ನೇ ಬೂಸ್ಟರ್ ಡೋಸ್ ಆಗಿ ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಧ್ಯಾಹ್ನ ಸಂಸತ್ ಭವನದಲ್ಲಿ ಭೇಟಿಗೆ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಕಾಲಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.