ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಸಿಎಂ ಯಡಿಯೂರಪ್ಪ ಅವರ ಪಾತ್ರ ಇಲ್ಲ. ಅವರನ್ನು ತಪ್ಪಿತಸ್ಥ ಎನ್ನಲು ಸೂಕ್ತ ಸಾಕ್ಷ್ಯಗಳು ಸಿಕ್ಕಿಲ್ಲ. ಹೀಗಾಗಿ ಈ ಪ್ರಕರಣಕ್ಕೂ ಅವರಿಗೂ ಸಂಬಂಧ ಇಲ್ಲ ಎಂದಿದೆ. ಜತೆಗೆ ಕೇಸ್ಮುಕ್ತಾಯಗೊಳಿಸಬಹುದು ಎಂದು ವರದಿಯಲ್ಲಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಸಂಬಂಧ ತನಿಖೆ ನಡೆಸಿರುವ ಲೊಕಾಯುಕ್ತ ಪೊಲೀಸರು, 27 ಸಂಪುಟಗಳಲ್ಲಿ 10 ಸಾವಿರಕ್ಕೂ ಅಧಿಕ ಪುಟಗಳ ವರದಿ ಸಲ್ಲಿಸಿದ್ದಾರೆ. ಇನ್ನು ಲೊಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಗೆ ಆಕ್ಷೇಪಣೆ ಸಲ್ಲಿಸಲು ದೂರದಾರ ವಾಸುದೇವ ರೆಡ್ಡಿ ಅವರಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿ ವಿಚಾರಣೆಯನ್ನು ಫೆ.2ಕ್ಕೆ ಮುಂದೂಡಿದೆ.
ಪ್ರಕರಣ ಹಿನ್ನೆಲೆ:2007-08ರಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿಯಿಂದ ವಶಪಡಿಸಿಕೊಂಡಿದ್ದ ಜಮೀನಿನಲ್ಲಿ 14 ಎಕೆರೆಗೂ ಅಧಿಕ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ವಾಸುದೇವರೆಡ್ಡಿ ಎಂಬುವರು ಲೋಕಾಯುಕ್ತಕ್ಕೆ ಈ ಕುರಿತು ದೂರು ನೀಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.