ಬೆಂಗಳೂರು:ರಾಜ್ಯದಲ್ಲಿ ನಾಯಕತ್ವ ಬದಲಾಗುತ್ತದೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲಾಗುತ್ತದೆ ಎಂದು ವಿಶ್ಲೇಷಿಸುತ್ತಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಹೊಸ ಸೂಟ್ ಸಿದ್ಧಪಡಿಸಿಟ್ಟುಕೊಂಡು ಭಿನ್ನಮತೀಯ ಚಟುವಟಿಕೆಗಳಲ್ಲಿ ತೊಡಗಿರುವ ಪಕ್ಷದೊಳಗಿನ ಬಂಡಾಯ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಅವರನ್ನು ವಿಶ್ವಾಸಕ್ಕೆ ತಗೆದುಕೊಳ್ಳುವ ಮೂಲಕ ಬಿಜೆಪಿ ಸರ್ಕಾರಕ್ಕೆ ತಮ್ಮ ನಾಯಕತ್ವ ಅಭಾಧಿತ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.
ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಗೆ ತೆರಳುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲಿದೆ, ಹೊಸ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಿದೆ, ಬಿಎಸ್ವೈ ಆಂಧ್ರ ರಾಜ್ಯಪಾಲರಾಗಿ ನೇಮಕಗೊಳ್ಳಲಿದ್ದಾರೆ ಎನ್ನುವ ಊಹಾಪೋಹದ ಸುದ್ದಿಗಳು ಹರಿದಾಡಿದ್ದವು.
ಅಷ್ಟೇ ಅಲ್ಲದೇ ಸಿಎಂ ವಿರೋಧಿ ಬಣದಿಂದಲೂ ಈ ತರಹದ ಸುದ್ದಿಗಳನ್ನು ವದಂತಿ ತರಹ ಹಬ್ಬಿಸಲಾಗಿತ್ತೆಂದು ಹೇಳಲಾಗುತ್ತಿದೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ಬಗ್ಗೆ ಅರಿವು ಇದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಾವೇ ಖುದ್ದಾಗಿ ಪ್ರದಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡುವ ಮೂಲಕ ರಾಜಕೀಯ ವಿರೋಧಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.