ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿ, ಪರಿಹಾರ ಕಾರ್ಯಗಳ ಕುರಿತು ಚರ್ಚಿಸಿದರು.
ನೆರೆಪೀಡಿತ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ಸಂವಾದ: ಪರಿಹಾರ ಕಾರ್ಯಗಳ ಪರಿಶೀಲನೆ - ಮಳೆ ಹಾನಿ
ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.
ಗೃಹ ಕಚೇರಿ ಕೃಷ್ಣಾದಿಂದ ಮಧ್ಯಾಹ್ನ 1 ಗಂಟೆಗೆ ವಿಡಿಯೋ ಸಂವಾದ ನಡೆಸಿದ ಸಿಎಂ, ನೆರೆಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ ಅವಲೋಕನ ಮಾಡಿದರು. ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಗತ್ಯ ಸಲಹೆ ಸೂಚನೆ ನೀಡಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕರಾವಳಿ, ಮಲೆನಾಡು ಹಾಗು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿದು ಅವಾಂತರ ಸೃಷ್ಟಿಸುತ್ತಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಕೊಪ್ಪಳ, ವಿಜಯನಗರ, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡು ಕಟ್ಟೆಚ್ಚರ ವಹಿಸುವಂತೆ ತಿಳಿಸಿದರು.