ಬೆಂಗಳೂರು: ಕೊರೊನಾ 2ನೇ ಅಲೆಯ ಅನ್ಲಾಕ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಎಲ್ಲಾ ಚಟುವಟಿಕೆಗೆ ಚಾಲನೆ ಸಿಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೆ ಜಿಲ್ಲಾ ಪ್ರವಾಸಕ್ಕೆ ತೆರಳುತ್ತಿದ್ದಾರೆ.
ನಾಳೆ ಕಲಬುರ್ಗಿ ಜಿಲ್ಲಾ ಪ್ರವಾಸಕ್ಕೆ ತೆರಳುತ್ತಿರುವ ಅವರು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ 9.30 ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಸಿಎಂ ಯಡಿಯೂರಪ್ಪ ಕಲಬುರ್ಗಿಗೆ ತೆರಳಲಿದ್ದಾರೆ. 11.15ಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹಾಗೂ ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದ ಅಡಿಯಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕಿರ್ಣದ ಅಡಿಗಲ್ಲು ಸಮಾರಂಭ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ 11.45 ಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.