ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರೆಸಿ ಕೆಲ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ನಿರ್ಬಂಧ ಸಡಿಲಿಕೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ. ತಮ್ಮ ಅಧಿಕೃತ ನಿವಾಸ ಕಾವೇರಿಯಿಂದ ನಿರ್ಗಮಿಸಿದ ಸಿಎಂ ವಿಧಾನಸೌಧದ ಮೂಲಕ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು. ನಂತರ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ತೆರಳಲಿರುವ ಅವರು, 11.15 ಕ್ಕೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಾಸನ ಜಿಲ್ಲಾ ಕೋವಿಡ್-19 ನಿಯಂತ್ರಣ ಮತ್ತು ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 12.15 ಕ್ಕೆ ಹಾಸನದಿಂದ ಶಿಕಾರಿಪುರಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಳಲಿದ್ದು, 1.30ಕ್ಕೆ ಶಿಕಾರಿಪುರ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಇಂದು ಶಿಕಾರಿಪುರದಲ್ಲೇ ಸಿಎಂ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಸಂಜೆ 4 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್-19 ನಿಯಂತ್ರಣ ಮತ್ತು ಇತರೆ ಅಭಿವೃದ್ಧಿ ವಿಷಯಗಳ ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ಸಭೆ ಮುಗಿಸಿ ಶಿಕಾರಿಪುರಕ್ಕೆ ವಾಪಸ್ಸಾಗಲಿರುವ ಸಿಎಂ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.