ಬೆಂಗಳೂರು: ಆಯುಧಪೂಜೆಯ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ, ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊರಡಿಸಿರುವ ವಿಚಾರ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುತ್ತವೆ. ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವೂ ಪಾಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.
ಸರ್ಕಾರದ ಸುತ್ತೋಲೆ:ವಿಧಾನಸೌಧ, ವಿಕಾಸಸೌಧ ಹಾಗು ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜಾ ಸಮಯದಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಕಾರಿಡಾರ್‌ಗಳಲ್ಲಿ ಬಳಸಬಾರದು. ಕಚೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕ ಬಣ್ಣವು ನೆಲಹಾಸುವಿನ ಮೇಲೆ ಬಿದ್ದು, ಸುಮಾರು ತಿಂಗಳುಗಳ ಕಾಲ ಹಾಗೆಯೇ ನೆಲಹಾಸುವಿನ ಮೇಲೆ ಅಂಟಿಕೊಂಡು ಉಳಿಯುತ್ತವೆ. ಇದರಿಂದ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತದೆ. ಈ ಕುರಿತಂತೆ, ಹಿಂದಿನ ಸಾಲುಗಳಲ್ಲಿಯೂ ಸಹ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದು, ಕೆಲವು ಇಲಾಖೆ/ಶಾಖೆಗಳಲ್ಲಿ ಈ ಸೂಚನೆಗಳನ್ನು ಪಾಲನೆ ಮಾಡಿಲ್ಲ.