ಬೆಂಗಳೂರು: ಕಾಂಗ್ರೆಸ್ನಲ್ಲಿ ಅಧಿಕಾರ ರಹಿತರಾಗಿ ಕಾಲ ಕಳೆಯುತ್ತಿರುವ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಕನಸು ಕಾಣಲು ಆರಂಭಿಸಿದ್ದಾರೆ.
ವಾರದ ಹಿಂದೆ ತಮ್ಮ ನಿವಾಸಕ್ಕೆ ಆಗಮಿಸಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಜೊತೆ ಸುದೀರ್ಘ ಚರ್ಚೆ ನಡೆಸಿದ್ದ ಇಬ್ರಾಹಿಂ, ಜೆಡಿಎಸ್ ಸೇರುವ ಒಲವು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವ ರೀತಿಯಲ್ಲಿ ಮೂರು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಿವಾಸಕ್ಕೆ ತೆರಳಿ ಇನ್ನೊಂದು ಸುತ್ತಿನ ಸಮಾಲೋಚನೆ ಪೂರ್ಣಗೊಳಿಸಿದ್ದಾರೆ. ಸಿ. ಎಂ. ಇಬ್ರಾಹಿಂ ಜೆಡಿಎಸ್ ಕಡೆ ಒಲವು ತೋರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಳೆದ ವಾರ ಅವರ ನಿವಾಸಕ್ಕೆ ತೆರಳಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಮುಂದಿನ ದಿನಗಳಲ್ಲಿ ಪಕ್ಷ ನಿಮಗೆ ಮಹತ್ವದ ಜವಾಬ್ದಾರಿ ನೀಡಲಿದೆ ಎಂಬ ಭರವಸೆ ನೀಡಿದ್ದರು. ಆದರೆ ಇದಾದ ಮರುದಿನವೇ ಇಬ್ರಾಹಿಂ ನೇರವಾಗಿ ದೇವೇಗೌಡರನ್ನು ಭೇಟಿಯಾಗಿರುವುದನ್ನು ಗಮನಿಸಿದರೆ ಇಬ್ರಾಹಿಂ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಮಾತುಕತೆ ಫಲಪ್ರದವಾಗಿಲ್ಲ ಎಂಬ ಅನುಮಾನ ಕಾಡುತ್ತಿದೆ.
ರಾಜ್ಯಾಧ್ಯಕ್ಷರಾಗುವ ಕನಸು :
ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದು, ಅಲ್ಪಸಂಖ್ಯಾತ ಸಮುದಾಯದ ಮತಬ್ಯಾಂಕ್ ಗಿಟ್ಟಿಸಲು ಮುಂದಾಗಿರುವ ಜೆಡಿಎಸ್ ನಾಯಕರು, ಅಲ್ಪಸಂಖ್ಯಾತ ಸಮುದಾಯಕ್ಕೆ ಆಯಕಟ್ಟಿನ ಸ್ಥಾನ ನೀಡಿ ಗೌರವಿಸಲು ಮುಂದಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಸದ್ಯ ಸಕ್ರಿಯವಾಗಿ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇವರು ಸಹ ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಬಿಜೆಪಿ ಇಲ್ಲವೇ ಕಾಂಗ್ರೆಸ್ನತ್ತ ಮುಖ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಓದಿ: ಬೆಂಗಳೂರಲ್ಲಿ ಸಿಐಡಿ ಡಿಎಸ್ಪಿ ನೇಣಿಗೆ ಶರಣು
ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಬದಲಾವಣೆ ತರಲು ಮುಂದಾಗಿರುವ ಹೆಚ್.ಡಿ. ಕುಮಾರಸ್ವಾಮಿ ಹಲವು ಸ್ಥಾನಗಳಿಗೆ ಪ್ರಮುಖ ನಾಯಕರನ್ನು ನೇಮಿಸಲು ತೀರ್ಮಾನಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಇಬ್ರಾಹಿಂ ಈ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ಒಂದೊಮ್ಮೆ ರಾಜ್ಯಾಧ್ಯಕ್ಷ ಹುದ್ದೆ ನೀಡುವುದಾದರೆ ತಾವು ಜೆಡಿಎಸ್ಗೆ ಬರಲು ಸಿದ್ಧ ಎಂದಿದ್ದಾರೆ ಎಂಬ ಮಾಹಿತಿ ಇದೆ.