ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಅಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಜೂನ್ 11 ರಂದು ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡುವರು. ಅಂದೇ ಮಧ್ಯಾಹ್ನ 1 ಗಂಟೆಯ ಬಳಿಕ ಈ ಸೌಲಭ್ಯವನ್ನು ಮಹಿಳೆಯರು ಪಡೆಯಬಹುದು.
ಇದನ್ನೂ ಓದಿ:ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ: ಹವಾಮಾನ ಇಲಾಖೆ
ಯೋಜನೆಯ ಲೋಗೋ, ಸ್ಮಾರ್ಟ್ ಕಾರ್ಡ್:ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಯೋಜನೆಯ ಲೋಗೋ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿ ಅನಾವರಣಗೊಳಿಸಲಿದ್ದಾರೆ.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ:ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತ ಹೇಳಿಕೆ ವೈರಲ್: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ:ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕರು ತಾವು ಅಧಿಕಾರಕ್ಕೆ ಬಂದರೆ, ಐದು ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಿಸಿದ್ದರು. ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಮೂಲಕ ಈ ಘೋಷಣೆಗಳನ್ನು ಮಾಡಿಸಿದ್ದರು. ಈ ಗ್ಯಾರಂಟಿ ಯೋಜನೆ ಬೆಂಬಲಿಸಿದ ಕರ್ನಾಟಕದ ಮತದಾರರು 224 ಕ್ಷೇತ್ರಗಳ ಪೈಕಿ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಸರಳ ಬಹುಮತಕ್ಕಿಂತ ಹೆಚ್ಚು ಸ್ಥಾನ ಗೆದ್ದು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರಿರುವ ಕಾಂಗ್ರೆಸ್ ಇದೀಗ ಹಂತ ಹಂತವಾಗಿ ಒಂದೊಂದೇ ಯೋಜನೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ.
ಇದನ್ನೂ ಓದಿ:ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಡಾ. ಫಾರೂಕ್ ಅಬ್ದುಲ್ಲಾ
ಐದು ಭಾಗ್ಯಗಳಲ್ಲಿ ಪ್ರಮುಖವಾದದ್ದು ಪ್ರತಿ ಮನೆಗೆ 200 ಯೂನಿಟ್‌ಗಳಷ್ಟು ವಿದ್ಯುತ್ ಅನ್ನು ಉಚಿತವಾಗಿ ಒದಗಿಸುವ 'ಗೃಹ ಜ್ಯೋತಿ'. ಉಳಿದಂತೆ 'ಗೃಹ ಲಕ್ಷ್ಮಿ' ಕುಟುಂಬದ ಪ್ರತಿ ಮಹಿಳೆಗೆ 2,000 ರೂ., 'ಅನ್ನ ಭಾಗ್ಯ' ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ವಿತರಿಸಲು, 'ಯುವ ನಿಧಿ' ನಿರುದ್ಯೋಗಿ ಪದವೀಧರರಿಗೆ 3,000 ರೂ. ಮತ್ತು 1,500 ರೂ. ನಿರುದ್ಯೋಗಿ ಡಿಪ್ಲೋಮಾದಾರರಿಗೆ ಎರಡು ವರ್ಷಗಳವರೆಗೆ (18ರಿಂದ 25 ವಯೋಮಾನದವರೆಗೆ) ಹಾಗೂ 'ಶಕ್ತಿ' ಯೊಜನೆ ರಾಜ್ಯದ ಸರ್ಕಾರಿ ಬಸ್ಸುಗಳಲ್ಲಿ ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಾಂಗ್ರೆಸ್ ಪಕ್ಷ ಘೋಷಿಸಿತ್ತು.
ಇದನ್ನೂ ಓದಿ:ಶಕ್ತಿ ಯೋಜನೆಯಿಂದ ಹೊರಗುಳಿದ ಚಿಗರಿ: ಹು-ಧಾ ಮಹಿಳೆಯರಿಗೆ ಎಸಿ ಬಸ್ ಪ್ರಯಾಣ ಭಾಗ್ಯವಿಲ್ಲ