ಬೆಂಗಳೂರು:ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅನ್ನು ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು.
ಲ್ಯಾಪ್ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸಭೆ ನಡೆಯುವಾಗಲೇ ದೂರವಾಣಿ ಮೂಲಕ ಸೂಚನೆ ನೀಡಿದರು. ವಿವಿಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ವಿತರಿಸಬೇಕಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಉನ್ನತ ಶಿಕ್ಷಣ ಕ್ಷೇತ್ರಕ್ಕೆ ₹5,470 ಕೋಟಿ: ರಾಜ್ಯದ ವಿವಿಗಳಲ್ಲಿ ಮಂಜೂರಾದ ಹುದ್ದೆಗಳ ಶೇ.50 ಕ್ಕೂ ಹೆಚ್ಚು ಖಾಲಿ ಇದ್ದು, 1,882 ಹುದ್ದೆಗಳಷ್ಟೇ ಭರ್ತಿಯಾಗಿವೆ. ವಿಶ್ವವಿದ್ಯಾಲಯಗಳ ಸಂಪನ್ಮೂಲದಿಂದಲೇ 2,865 ಅತಿಥಿ ಉಪನ್ಯಾಸಕರಿಗೆ ವೇತನ ಭರಿಸುವ ಕಾರಣ, ಅವರಿಗೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕುಲಪತಿಗಳು ಮತ್ತು ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಕ್ಕೆ ತಂದರು. ನಿವೃತ್ತಿ ವೇತನ ವಿತರಣೆಯಲ್ಲಿ ಹಳೆಯ ವಿವಿಗಳು ವಿಭಜನೆಯಾದರೂ ಹಳೆಯ ವಿವಿಗಳು ಮಾತ್ರ ನಿವೃತ್ತಿ ವೇತನ ಪಾವತಿಸುತ್ತಿದ್ದಾರೆ. ಇದರಿಂದ ಹಳೆಯ ವಿವಿಗಳ ಆರ್ಥಿಕ ಹೊರೆ ಹೆಚ್ಚಾಗಿದೆ. ಪ್ರಸಕ್ತ ಆಯವ್ಯಯದಲ್ಲಿ ಒಟ್ಟಾರೆಯಾಗಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ 5,470 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, 2,474 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ ಎಂದು ಕುಲಪತಿಗಳು ಮುಖ್ಯಮಂತ್ರಿಗಳಿಗೆ ಸಮಸ್ಯೆ ಹೇಳಿಕೊಂಡರು.
ಆಯವ್ಯಯ ಹಂಚಿಕೆ ಕಡಿಮೆಯಾಗುತ್ತಿದೆ. ಇನ್ನೊಂದೆಡೆ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ನಾವು ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಇದಲ್ಲದೆ ಉನ್ನತ ಶಿಕ್ಷಣ ಇಲಾಖೆಯ ಆಯವ್ಯಯದಲ್ಲಿ ಶೇ.88 ರಷ್ಟು ಅನುದಾನ ವೇತನಕ್ಕೆ ಬಳಕೆಯಾಗುತ್ತಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕೋದ್ಯಮಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಸಿಎಂ ಹೇಳಿದರು.
ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್ ಹೇಳಿದ್ದಾರೆ.