ಬೆಂಗಳೂರು :ಮೇ 4ರ ನಂತರ ಪಿಎಂ ಮೋದಿ ಕೈಗಾರಿಕೆಗಳ ಪುನರಾರಂಭ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಅದರಂತೆ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ವಿವಿಧ ವಾಣಿಜ್ಯೋದ್ಯಮ ಸಂಘಟನೆಗಳ ಮುಖ್ಯಸ್ಥರೊಂದಿಗೆ ಸಿಎಂ ಬಿಎಸ್ವೈ ಇಂದು ಸಭೆ ನಡೆಸಿ ಚರ್ಚಿಸಿದ್ದಾರೆ. ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು, ಸಲಹೆಗಳನ್ನು ನೀಡಿದ ಉದ್ಯಮಿಗಳು, ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ಕೈಗಾರಿಕೋದ್ಯಮಿಗಳೂ ಸಂಕಷ್ಟಕ್ಕೆ ಒಳಗಾಗಿರುವುದು ಸರ್ಕಾರಕ್ಕೆ ಅರಿವಿದೆ. ಆದರೆ, ಕಾರ್ಖಾನೆಗಳ ಮಾಲೀಕರು, ಕಾರ್ಮಿಕರ ವೇತನವನ್ನು ತಪ್ಪದೇ ಪಾವತಿಸುವಂತೆ ಮನವಿ ಮಾಡಿದರು. ಅಲ್ಲದೆ ಕಾರ್ಖಾನೆಗಳಲ್ಲಿ ಕಾರ್ಮಿಕರು/ ಸಿಬ್ಬಂದಿಯ ಸುರಕ್ಷತೆಗೆ ಆದ್ಯತೆ ನೀಡಬೇಕು ಹಾಗೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸೂಚಿಸಿದರು.