ಬೆಂಗಳೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗು ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮದಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ 16,095 ಕಲಾವಿದರು, ಸಾಹಿತಿಗಳಿಗೆ ತಲಾ ಎರಡು ಸಾವಿರ ರೂ. ಗಳಂತೆ ಒಟ್ಟು 3.21 ಕೋಟಿ ರೂ. ಆರ್ಥಿಕ ನೆರವು ಒದಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರವಾಸೋದ್ಯಮ ವಲಯದಲ್ಲಿ ಕೋವಿಡ್-19 ನಿಂದಾಗಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದ್ದು, 3 ಲಕ್ಷ ಉದ್ಯೋಗ ಅಪಾಯದ ಅಂಚಿನಲ್ಲಿದೆ. ಕೆ ಎಸ್ಟಿಡಿಸಿ ಸಂಸ್ಥೆ ಹಾಗೂ ಜಂಗಲ್ ಲಾಡ್ಜಸ್ ಸಂಸ್ಥೆಗೆ ಕ್ರಮವಾಗಿ 14 ಕೋಟಿ ರೂ. ಹಾಗೂ 15 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.