ಬೆಂಗಳೂರು: ಸಾರಿಗೆ ನೌಕರರ ಮತ್ತೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನೌಕರರ ಬೇಡಿಕೆ ಪರಿಗಣಿಸುವ ಕುರಿತು ಸಾರಿಗೆ ಇಲಾಖೆಯೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಹಾಗು ಸಾರಿಗೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ ನಂತರ ಸಾರಿಗೆ ನೌಕರರ ಮುಷ್ಕರದ ವಿಚಾರ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
ಆರನೇ ವೇತನ ಆಯೋಗ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಏಪ್ರಿಲ್ 7 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ.