ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ Fact Check ಘಟಕ ರಚನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ - ಈಟಿವಿ ಭಾರತ್​ ಕನ್ನಡ ನ್ಯೂಸ್

ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Aug 21, 2023, 9:20 PM IST

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ಧ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯವಾಗಿದೆ. ಹೀಗಾಗಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು‌ ನಿಶಾನೆ ತೋರಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಿ ಈ ನಿರ್ಧಾರ ಕೈಗೊಂಡರು.‌ ಸುಳ್ಳು ಸುದ್ದಿ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್​ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ಫ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣಾ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ನಗರ ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲವಾಗುತ್ತದೆ. ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು.

ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಈ ಹಿಂದೆ ಕೂಡ ಪ್ರಿಯಾಂಕ್​ ಖರ್ಗೆ, ನಾವು ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯನ್ನು ಬಂದ್ ಮಾಡಲು ನಿರ್ಧರಿಸಿದ್ದೇವೆ. ಹೋದ ಸಲ ಅವರ ಸರ್ಕಾರದಲ್ಲಿ ಅವರ ಆಟ ನಡೆಯಿತು. ಪೊಲೀಸ್ ಇಲಾಖೆಯ ಫ್ಯಾಕ್ಟ್ ಚೆಕ್ ಯೂನಿಟ್ ಬಂದ್ ಮಾಡಿದ್ದರು. ಸ್ವತಃ ಬಿಜೆಪಿಯವರೇ ಫೇಕ್ ನ್ಯೂಸ್​ಗಳನ್ನು ಸೃಷ್ಟಿ ಮಾಡುತ್ತಿದ್ದರು. ಆದರೆ ನಾವು ಇನ್ನು ಮುಂದೆ ಬಿಡಲ್ಲ. ಫ್ಯಾಕ್ಟ್ ಚೆಕ್ ಯೂನಿಟನ್ನ ಮತ್ತಷ್ಟು ಪ್ರಬಲಗೊಳಿಸುತ್ತೇವೆ. ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ಕೋಮುಗಲಭೆ, ಶಾಂತಿ ಕದಡುವ ಪೋಸ್ಟ್ ಗಳನ್ನ ಪ್ರಕಟಿಸಿದರೆ ಅಂಥವರ ವಿರುದ್ದ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದರು.

ಇದನ್ನೂ ಓದಿ :ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ABOUT THE AUTHOR

...view details