ನವದೆಹಲಿ/ಬೆಂಗಳೂರು: ಕಾವೇರಿ ನದಿ ಹಂಚಿಕೆ ವಿವಾದವಾಗಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಕೂಡ ಇದ್ದರು.
ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ದೆಹಲಿ ಮಟ್ಟದಲ್ಲಿ ಮಾತುಕತೆ ನಡೆಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ದೆಹಲಿಯ ತಾಜ್ ಹೋಟೆಲ್ನಲ್ಲಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿದ್ದು, ಗುರುವಾರ ಬೆಳಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡುವ ನಿರೀಕ್ಷೆ ಇದೆ. ಇದೇ ಸಮಯದಲ್ಲಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರವನ್ನು ಸಿಎಂ ಹಾಗೂ ಸಚಿವರು ಭೇಟಿ ಮಾಡಿದ್ದಾರೆ.
ನನ್ನ ಸುದ್ದಿಗೆ ಬಂದವರ ಸೆಟಲ್‌ಮೆಂಟ್ ಆಗಿದೆ:ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್‌ಮೆಂಟ್ ಆಗಿದೆ. ಮಾಜಿ ಸಚಿವ, ಬಿಜೆಪಿ ಮುಖಂಡ ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಇಂದು ಮಾತನಾಡಿದ್ದ ಈಶ್ವರಪ್ಪ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಇಂಡಿಯಾ ಮೈತ್ರಿಕೂಟಕ್ಕೆ ಕಾವೇರಿ ನೀರನ್ನು ಒತ್ತೆ ಇಟ್ಟಿದ್ದಾರೆ, ಅವರು ʼನೀರಿನ ಕಳ್ಳʼ ಎಂದು ದೂರಿದ್ದರು.