ಕರ್ನಾಟಕ

karnataka

ETV Bharat / state

ಹಿಂದಿನ ವರ್ಷಗಳ ಅನುಭವದಿಂದ ಜೀವಹಾನಿ ಪ್ರಕರಣ ತಪ್ಪಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ - ಸಾವಿನ ಪ್ರಕರಣಗಳನ್ನು ತಡೆಗಟ್ಟಲು ಶ್ರಮವಹಿಸಿ

ಹಿಂದಿನ ವರ್ಷಗಳ ಅನುಭವದಿಂದ ಭಾರಿ ಮಳೆಯಿಂದ ಆಗುವ ಸಾವಿನ ಪ್ರಕರಣಗಳನ್ನು ತಪ್ಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

CM Siddaramaiah
ಸಿಎಂ ಸಿದ್ದರಾಮಯ್ಯ

By

Published : Jul 26, 2023, 9:45 PM IST

ಬೆಂಗಳೂರು:''ಹಿಂದಿನ ವರ್ಷಗಳ ಅನುಭವ ಮತ್ತು ಅನಾಹುತಗಳಿಂದ ಬಹಳಷ್ಟು ಸಾವಿನ, ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಿದೆ. ಕೃಷಿ, ಗ್ರಾಮೀಣಾಭಿವೃದ್ಧಿ, ಜಿಲ್ಲಾಡಳಿತ, ಪೊಲೀಸ್ ಹಾಗೂ ಇನ್ನಿತರ ಇಲಾಖೆಗಳ ನಡುವಿನ ಸಮನ್ವಯತೆಯಿಂದ ಸಾವು, ಮಳೆ ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಿದೆ. ಈ ದಿಕ್ಕಿನಲ್ಲಿ ಸೂಕ್ತ ಕ್ರಮ ವಹಿಸಬೇಕು'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು. ನೆರೆ ಪೀಡಿತ, ಮಳೆಹಾನಿಗೊಳಗಾದ ಜಿಲ್ಲೆಗಳ ಸ್ಥಿತಿಗತಿ ಕುರಿತು ಸಮಗ್ರವಾದ ಮಾಹಿತಿ ಪಡೆದುಕೊಂಡರು. ಜಿಲ್ಲಾವಾರು ಪ್ರತ್ಯೇಕವಾಗಿಯೇ ಸಂವಾದ ನಡೆಸಿ ಮಾಹಿತಿ ಕಲೆ ಹಾಕಿದರು. ''ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಪ್ರವಾಹದ ಮುನ್ಸೂಚನೆ ಬಂದ ಕೂಡಲೇ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು. ಹಿಂದಿನ ಸರ್ಕಾರದಿಂದ ಪರ್ಯಾಯವಾಗಿ ಕಟ್ಟಲಾಗಿರುವ ಮನೆಗಳು ಯಾರೂ ವಾಸ ಮಾಡಲು ಕೂಡ ಯೋಗ್ಯವಲ್ಲ ಎನ್ನುವ ದೂರುಗಳು ಜನರಿಂದ ವ್ಯಾಪಕವಾಗಿ ಬರುತ್ತಿವೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳ ಕಡೆಗೆ ಹೆಚ್ಚು ಒತ್ತು ನೀಡಬೇಕು'' ಎಂದು ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವೀಡಿಯೊ ಸಂವಾದ ನಡೆಸಿದರು

''ಮಳೆ ಅನಾಹುತಗಳನ್ನು ತಪ್ಪಿಸಲು ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಪದೇ ಪದೆ ಪ್ರವಾಹವಾಗುವ ಸ್ಥಳಗಳಲ್ಲಿ ಜನರಿಗೆ ಮನವರಿಕೆ ಮಾಡಿ ಸ್ಥಳಾಂತರ ಮಾಡಿ ಜೀವಹಾನಿ ತಪ್ಪಿಸಬೇಕು. ನೆರೆ ಬಂದು ನೀರು ಹೆಚ್ಚಾದರೆ ಅದರ ಬಳಿ ಜನರು ಹೋಗದಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕು. ಜನರಿಗೆ ಈ ಬಗ್ಗೆ ಎಚ್ಚರಿಕೆ ನೀಡುವುದು ಮಾತ್ರವಲ್ಲದೇ ಅಗತ್ಯ ಅರಿವು ಮೂಡಿಸುವ ಕೆಲಸ ಮಾಡಿ ಪ್ರಾಣಹಾನಿ ತಪ್ಪಿಸಬೇಕು'' ಎಂದರು.

ಭೂ ಕುಸಿತದ ಸಾಧ್ಯತೆ ಮೊದಲೇ ಗೊತ್ತಿರುತ್ತೆ:ಭೂ ಕುಸಿತ ಆಗಬಹುದಾದ ಸ್ಥಳಗಳ ಬಗ್ಗೆ ಒಂದು ಹಂತಕ್ಕೆ ಅಧಿಕಾರಿಗಳಿಗೆ ಮೊದಲೇ ಮಾಹಿತಿ ಇರುತ್ತದೆ. ಪೊಲೀಸ್, ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮಧ್ಯೆ ಸಮನ್ವಯವಿದ್ದರೆ ಸಾಕಷ್ಟು ಜೀವಹಾನಿ ತಪ್ಪಿಸಬಹುದು. ಮಣ್ಣು ಕುಸಿತವಾಗುವ ಸ್ಥಳಗಳ ಬಗ್ಗೆ ಇಲಾಖೆಗಳಿಗೆ ಮಾಹಿತಿ ಇರುತ್ತದೆ. ಇಂತಹ ಕಡೆ ಕಾಳಜಿಯಿಂದ ವರ್ತಿಸಿ ಅನಾಹುತ ತಪ್ಪಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

ಸಾವಿನ ಪ್ರಕರಣಗಳನ್ನು ತಡೆಗಟ್ಟಲು ಹೆಚ್ಚಿನ ಶ್ರಮವಹಿಸಿ:ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣ ಹೊಂದಿದ್ದಾರೆ. ಇವರಿಗೆ ತುರ್ತಾಗಿ ಪರಿಹಾರ ಒದಗಿಸಲಾಗಿದೆ. ಆದರೆ, ಜಿಲ್ಲಾಡಳಿತ ಅಲರ್ಟ್ ಆಗಿದ್ದರೆ, ಈ ಅನಾಹುತಗಳಲ್ಲಿ ಸಾಕಷ್ಟು ತಪ್ಪಿಸಬಹುದಿತ್ತಲ್ಲವೇ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಮಳೆ ಸಾಧ್ಯತೆ, ಮಳೆಯ ಬಿರುಸಿನ ಬಗ್ಗೆ ಪ್ರತಿದಿನ ಪತ್ರಿಕಾಗೋಷ್ಠಿ ನಡೆಸಬೇಕು. ಕಾಲು ಜಾರುವ ಕಡೆಗಳಲ್ಲಿ ಹೋಗಬಾರದು, ತುಂಬಿ ಹರಿವ ನದಿಗಳನ್ನು ಹಾಯಬಾರದು ಎಂದು ಸೂಚಿಸಬೇಕು. ಸಾವು ತಡೆಗಟ್ಟಲು ಹೆಚ್ಚಿನ ಶ್ರಮವಹಿಸಬೇಕು ಎಂದರು.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ವೀಡಿಯೊ ಸಂವಾದ ನಡೆಸಿದರು

ದುರಸ್ತಿಗೆ ತಕ್ಷಣ ಕ್ರಮವಹಿಸಲು ಸೂಚನೆ:ಅಂಗನವಾಡಿ, ಶಾಲಾ ಕಟ್ಟಡಗಳು, ಆಸ್ಪತ್ರೆಗಳ ಕಟ್ಟಡ ಶಿಥಿಲ ಆಗಿವೆ ಎನ್ನುವ ಮಾಹಿತಿ ಮೊದಲೇ ಗೊತ್ತಿರುತ್ತದೆ. ಯಾವ ಕಟ್ಟಡಗಳಲ್ಲಿ ಸೋರಿಕೆ ಆಗುತ್ತಿದೆ ಎನ್ನುವ ಮಾಹಿತಿಯೂ ಮೊದಲೇ ಗೊತ್ತಿರುತ್ತದೆ. ದುರಸ್ತಿ, ಸ್ಥಳಾಂತರ, ರಿಪೇರಿಗೆ ಸಾಕಷ್ಟು ಹಣ ಮೀಸಲಿಟ್ಟಿದ್ದರೂ ಈ ಬಗ್ಗೆ ಮೊದಲೇ ಕ್ರಮ ಏಕೆ ಕೈಗೊಳ್ಳುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂತಹ ಉದಾಸೀನ ಮತ್ತು ನಿರ್ಲಕ್ಷ್ಯ ಸಹಿಸಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದರು.

ಪ್ರತಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಅನುದಾನ ಲಭ್ಯವಿದೆ. ಎಸ್.ಡಿ.ಆರ್.ಎಫ್ ನ ಅಡಿಯೂ ಅನುದಾನದ ಲಭ್ಯತೆ ಇದೆ. ದುರಸ್ತಿಗೆ ತಕ್ಷಣ ಕ್ರಮ ವಹಿಸಿ. ಹೆಚ್ಚಿನ ಅನುದಾನ ಅಗತ್ಯವಿದ್ದರೆ ಮನವಿ ಕಳುಹಿಸಿ. ಜಿಲ್ಲೆಯ ಎಲ್ಲ ಆಗುಹೋಗುಗಳ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಉಳಿಯಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಬಹಳ ಮೊದಲೇ ವಾರ್ ರೂಂಗಳನ್ನು ತೆಗೆಯಲಾಗಿತ್ತು. ಇದರಿಂದ ಸಾಕಷ್ಟು ಅನಾಹುತಗಳನ್ನು ತಪ್ಪಿಸಿದ್ದೇವೆ. ಆದರೆ ಇತರ ಮಳೆ ಅಪಘಾತಗಳಿಂದ 9 ಸಾವು ಸಂಭವಿಸಿದೆ ಎಂದು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ವೇಳೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಮುಂಜಾಗ್ರತಾ ಕ್ರಮದ ಬಗ್ಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಇದೇ ಕ್ರಮ ಎಲ್ಲ ಜಿಲ್ಲೆಗಳಲ್ಲೂ ಅಗತ್ಯ ಎಂದರು.

ಅಧಿಕಾರಿಗಳು ನೀಡಿದ ಮಾಹಿತಿ:ರಾಜ್ಯದಲ್ಲಿ ಜೂನ್‌ ತಿಂಗಳಿನಲ್ಲಿ ಬೀಪರ್‌ ಜಾಯ್‌ ಚಂಡಮಾರುತದ ಕಾರಣದಿಂದಾಗಿ ಶೇ.56 ರಷ್ಟು ಮಳೆ ಕೊರತೆ ಕಂಡು ಬಂತು. ಆದರೆ, ಜುಲೈ ತಿಂಗಳಿನಲ್ಲಿ ಇಲ್ಲಿಯವರೆಗೆ ವಾಡಿಕೆ ಮಳೆ 228 ಮಿ.ಮೀ. ನಷ್ಟಿದೆ. ಆದರೆ, ರಾಜ್ಯದಲ್ಲಿ 313 ಮಿ.ಮೀ. ಮಳೆ ಆಗಿದೆ. ಇದು ವಾಡಿಕೆ ಮಳೆಗಿಂತ ಶೇ. 37 ರಷ್ಟು ಹೆಚ್ಚಾಗಿದೆ. ಜುಲೈ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜೂನ್‌ ಅಂತ್ಯಕ್ಕೆ ಇದ್ದ ಮಳೆ ಕೊರತೆಯು ಕಡಿಮೆಯಾಗಿದೆ. ಮಳೆ ಕೊರತೆ ಕಂಡು ಬಂದ ತಾಲೂಕುಗಳ ಸಂಖ್ಯೆ ಇಳಿಕೆಯಾಗಿದೆ. ಪ್ರಸ್ತುತ ಜೂನ್‌ 1ರಿಂದ ಈ ವರೆಗೆ ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 21 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. 6 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪಕಾರ, ಮುಂದಿನ ಒಂದು ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ಕೊರತೆ ಇರುವ ತಾಲೂಕುಗಳ ಸಂಖ್ಯೆ ಇಳಿಕೆಯಾಗಲಿದೆ ಬಹುತೇಕ ಎಲ್ಲ ಜಲಾಶಯಗಳಲ್ಲಿ ನೀರು ಬಹುತೇಕ ಭರ್ತಿಯಾಗುತ್ತಿವೆ. ಕಳೆದ ಒಂದು ವಾರದಲ್ಲಿ ಒಟ್ಟು ಸಂಚಿತ ಒಳಹರಿವು 227 ಟಿಎಂಸಿಯಷ್ಟಾಗಿದೆ ಜೂನ್‌ 1 ರಿಂದ ಈ ವರೆಗೆ ರಾಜ್ಯದಲ್ಲಿ ನೀರಿನಲ್ಲಿ ಸಿಲುಕಿ, ಸಿಡಿಲು ಬಡಿದು, ಮನೆ ಕುಸಿದು, ಮರ ಬಿದ್ದು ಹಾಗೂ ಭೂಕುಸಿತದಿಂದ ಒಟ್ಟು 38 ಮಾನವ ಜೀವಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ ರಾಜ್ಯದಲ್ಲಿ 57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರವಾಗಿ ಹಾಗೂ 2,682 ಮನೆಗಳು ಭಾಗಶಃ ಹಾನಿಯಾಗಿದೆ.

ಮಳೆಯಿಂದಾಗಿ 105 ಜಾನುವಾರುಗಳು ಮೃತಪಟ್ಟಿವೆ. 185 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 356 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು- ಒಟ್ಟು 541.39 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಜಲಾವೃತಗೊಂಡಿದೆ. 407 ಕಿ.ಮೀ. ರಾಜ್ಯ ಹೆದ್ದಾರಿ, 425 ಕಿ.ಮೀ. ಜಿಲ್ಲಾ ಹೆದ್ದಾರಿ, ಗ್ರಾಮೀಣ ರಸ್ತೆಗಳು 1277 ಕಿ.ಮೀ. ಒಟ್ಟು 2109 ಕಿ.ಮೀ. ರಸ್ತೆ ಹಾನಿಯಾಗಿದೆ. 189 ಸೇತುವೆಗಳು, 889 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿರುವುದು ವರದಿಯಾಗಿದೆ. 11,995 ವಿದ್ಯುತ್‌ ಕಂಬಗಳು, 894 ಟ್ರಾನ್ಸ್‌ಫಾರ್ಮರ್‌ ಗಳು ಹಾನಿಯಾಗಿದ್ದು, 215 ಕಿ.ಮೀ. ಉದ್ದದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಪ್ರಸ್ತುತ ಎರಡು ಪರಿಹಾರ ಶಿಬಿರಗಳಲ್ಲಿ 50 ಜನರಿಗೆ ಆಶ್ರಯ ನೀಡಲಾಗಿದೆ. ಜೂನ್‌ ತಿಂಗಳಿನಲ್ಲಿ ಮಳೆ ಕೊರತೆ ಆಗಿರುವುದರಿಂದ ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ.53 ರಷ್ಟು ಬಿತ್ತನೆಯಾಗಿದೆ. ವಾಡಿಕೆಯಂತೆ ಶೇ.83 ರಷ್ಟು ಬಿತ್ತನೆಯಾಗಿದೆ ರಾಜ್ಯದಲ್ಲಿ 156 ಲಕ್ಷ ಟನ್‌ ಮೇವು ದಾಸ್ತಾನು ಇದ್ದು, ಮುಂದಿನ 29 ವಾರಗಳಲ್ಲಿ ಸಾಕಾಗುವಷ್ಟಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರ ನೀಡಿದರು.

ಇದನ್ನೂ ಓದಿ:ಡಿಸಿ, ಎಸ್​ಪಿ ಸೇರಿ ಸರ್ಕಾರಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ವಾಸ ಮಾಡಬೇಕು: ಡಿಸಿಎಂ ಶಿವಕುಮಾರ್​ ಸೂಚನೆ

ABOUT THE AUTHOR

...view details