ಕರ್ನಾಟಕ

karnataka

ETV Bharat / state

CM Siddaramaiah: ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ - etv bharat kannada

ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ಧವಾಗಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

cm-siddaramaiah-instructed-to-officers-find-the-source-of-fake-news-and-take-action
ಫೇಕ್ ನ್ಯೂಸ್‌ಗಳ ಮೂಲ ಪತ್ತೆ ಹಚ್ಚಿ, ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ

By

Published : Jun 20, 2023, 3:19 PM IST

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇಂದು ತಮ್ಮನ್ನು ಭೇಟಿ ಮಾಡಿದ ಗೃಹ ಸಚಿವ ಜಿ. ಪರಮೇಶ್ವರ್ ಅವರ ಜತೆಗೂ ಈ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸೂಚಿಸಿದ್ದಾರೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೇ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಾಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ಕಮಿಷನರೇಟ್/ಪ್ರಧಾನ ಕಚೇರಿಯಲ್ಲಿ ನಲ್ಲಿ ಫ್ಯಾಕ್ಟ್ ಚೆಕ್:ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ಧವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿ ನಾಯಕರ ವಿರುದ್ಧ ದೂರು ದಾಖಲು:ಕಾಂಗ್ರೆಸ್ ನಾಯಕರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸುತ್ತಿರುವ ಆರೋಪದಡಿ ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ ಸೆಲ್) ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವಿಯಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿತ್ತು. ಆ್ಯನಿಮೇಟೆಡ್ ವಿಡಿಯೋ ಮೂಲಕ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಿ, ರಾಹುಲ್ ಗಾಂಧಿಯವರ ವಿರುದ್ಧ ವಿಡಿಯೋ ಹರಿಬಿಟ್ಟ ಬಗ್ಗೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್​ ವಕ್ತಾರ ರಮೇಶ್ ಬಾಬು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದರು.

ABOUT THE AUTHOR

...view details