ಕರ್ನಾಟಕ

karnataka

ETV Bharat / state

ಫೆಬ್ರವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಿ: ಸಿಎಂ ಸಿದ್ದರಾಮಯ್ಯ ಸೂಚನೆ - etv bharat kannada

ಫೆಬ್ರವರಿ ಒಳಗೆ ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

cm-siddaramaiah-instructs-to-spend-capital-expenditure-by-february-end
ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಿ: ಸಿಎಂ ಸಿದ್ದರಾಮಯ್ಯ ಸೂಚನೆ

By ETV Bharat Karnataka Team

Published : Sep 4, 2023, 10:03 PM IST

ಬೆಂಗಳೂರು: ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇಂದು ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಇದು ಸರ್ಕಾರದ ಆಸ್ತಿ ಸೃಜನೆಗೂ ಪೂರಕ ಆಗಿರುವುದರಿಂದ ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ಸೂಚಿಸಿದರು. ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆಕೆಆರ್​ಡಿಬಿಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 1400 ಕೋಟಿ ಲಭ್ಯವಿದೆ. ಅಗತ್ಯ ಔಷಧ ಮತ್ತು ಉಪಕರಣಗಳ ಖರೀದಿಗೆ ಬಳಕೆ ಮಾಡಿಕೊಳ್ಳಲು ಸೂಚಿಸಲಾಯಿತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್‌ ಪಬ್ಲಿಕ್‌ ಹೆಲ್ತ್‌ ಸ್ಟಾಂಡರ್ಡ್‌ ಗಳ ಅನ್ವಯ ನಿಗದಿ ಪಡಿಸುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್. ಎಸ್. ಬೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್‌ ಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್‌, ಡಾ. ಎಂ.ಟಿ. ರೇಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:ಪ್ರತಿಷ್ಠಿತ NSE ಪರೀಕ್ಷೆ ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡುವಂತೆ ಕೋರಿ ಪ್ರಧಾನಿಗೆ ಸಿಎಂ ಪತ್ರ

ABOUT THE AUTHOR

...view details