ಬೆಂಗಳೂರು: ಮಹಾನಗರದ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಮಗೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.
ಇಂದು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆ ಆರ್ ವೃತ್ತ ಸಮೀಪ ಸಂಭವಿಸಿದ ಅವಘಡದಲ್ಲಿ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ಯುವತಿಯೊಬ್ಬರು ಸಾವನ್ನಪ್ಪಿದ್ದರೆ. ಘಟನೆ ಸ್ಥಳ ಪರಿಶೀಲನೆ ಹಾಗೂ ಯುವತಿಯನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾದ ದಟ್ಟಣೆ ಹಾಗೂ ಆ ಸಂದರ್ಭದಲ್ಲಿ ಜನ ಅನುಭವಿಸಿದ ಸಮಸ್ಯೆಯನ್ನು ಮನಗಂಡಿರುವ ಅವರು ತಮಗೆ ಜೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂಬ ನಿರ್ಧಾರ ಕೈಗೊಂಡಿದ್ದಾರೆ.
ನಿನ್ನೆಯಷ್ಟೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಸಿದ್ದರಾಮಯ್ಯ ಈ ಹಿಂದೆ 2013 ರಿಂದ 18ರ ಅವಧಿಗೆ ಪೂರ್ಣಾವಧಿ ಐದು ವರ್ಷಗಳ ಅಧಿಕಾರ ಪೂರೈಸಿದ್ದರು. ದೇವರಾಜ್ ಅರಸು ಬಳಿಕ 5 ವರ್ಷದ ಅಧಿಕಾರವನ್ನು ಪೂರೈಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದರು. ಇದೀಗ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡಿ ಬಹುಮತದಿಂದ ಅಧಿಕಾರಕ್ಕೆ ತಂದಿದ್ದು, ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.