ಬೆಂಗಳೂರು: ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ನೂತನ ಸಚಿವರನ್ನು ಪರಿಚಯ ಮಾಡಿಕೊಡಬೇಕು ಎಂದು ಹಂಗಾಮಿ ಸ್ಪೀಕರ್ ಆರ್. ವಿ. ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರಿದರು. ಆಗ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದಿದ್ದು, ಹೊಸ ಸರ್ಕಾರ ರಚನೆಯಾಗಿದೆ. ರಾಜ್ಯಪಾಲರು ನನಗೆ, ಉಪ ಮುಖ್ಯಮಂತ್ರಿ ಹಾಗೂ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ ದಿನದಿಂದಲೇ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದರು.
ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಇದ್ದುದ್ದರಿಂದ ಹೊಸ ಸಚಿವರ ಪರಿಚಯ ಸದನಕ್ಕೆ ಮಾಡಿಕೊಟ್ಟಿರಲಿಲ್ಲ ಎಂದು ಹೇಳುತ್ತಾ, ಸಚಿವರನ್ನು ಪರಿಚಯಿಸಲು ಸಭಾಧ್ಯಕ್ಷರ ಅನುಮತಿ ಕೋರಿದರು. ಸಭಾಧ್ಯಕ್ಷರ ಅನುಮತಿ ಪಡೆದು ಸಿಎಂ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಡಾ. ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ತಡವಾಗಿ ಸದನಕ್ಕೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರನ್ನೂ ಸದನಕ್ಕೆ ಪರಿಚಯ ಮಾಡಿಕೊಟ್ಟರು. ಪ್ರತಿ ಸಚಿವರನ್ನು ಪರಿಚಯಿಸಿದಾಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.
ಮಧ್ಯೆ ಪ್ರವೇಶಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೂತನ ಮುಖ್ಯಮಂತ್ರಿ ಮತ್ತು ಸಚಿವರಿಗೆ ಅಭಿನಂದನೆಗಳು. ನೂತನ ಸಚಿವರಿಗೆ ಇದುವರೆಗೆ ಖಾತೆ ಹಂಚಿಕೆ ಮಾಡಿಲ್ಲ. ಖಾತೆ ಹಂಚಿಕೆ ಮಾಡಿ ಪರಿಚಯಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ಲೇವಡಿ ಮಾಡಿದರು. ಕೂಡಲೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆದಷ್ಟು ಬೇಗ ಸಚಿವರಿಗೆ ಜವಾಬ್ದಾರಿ ಕೊಡುತ್ತೇವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಬಳಿಕ ಎಷ್ಟು ದಿನ ಒಬ್ಬರೇ ಕೆಲಸ ಮಾಡಿದ್ದರು ಎಂದು ತಿರುಗೇಟು ನೀಡಿದರಲ್ಲದೆ, ಸಚಿವರಿಗೆ ಖಾತೆ ಹಂಚಿಕೆ ಮಾಡುವ ವಿಚಾರದಲ್ಲಿ ನಿಮಗೆ ಸಂಶಯ ಬೇಡ. ನಿಮ್ಮ ಸಲಹೆಗೆ ಅಭಿನಂದನೆಗಳು ಎಂದರು.