ಕರ್ನಾಟಕ

karnataka

ETV Bharat / state

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಕ್ಯಾಲೆಂಡರ್ ಈವೆಂಟ್ ಜಾರಿಗೆ ಸಿಎಂ ಸೂಚನೆ

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

cm-siddaramaiah-notice-to-implement-uniform-calendar-event-in-universities
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಕ್ಯಾಲೆಂಡರ್ ಈವೆಂಟ್ ಜಾರಿಗೆ ಸಿಎಂ ಸೂಚನೆ

By ETV Bharat Karnataka Team

Published : Oct 21, 2023, 9:33 PM IST

ಬೆಂಗಳೂರು:ರಾಜ್ಯದಲ್ಲಿನ ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಸರಿಪಡಿಸಲು ಏಕರೂಪದ ಕ್ಯಾಲೆಂಡರ್‌ ಆಫ್‌ ಇವೆಂಟ್ಸ್‌ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧಿಕಾರಿಗಳು, ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪರಿಷತ್ತು ಕಾರ್ಯನಿರತವಾಗಿದೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಬೇಕು. ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಸಿಎಂ ಸೂಚನೆ ನೀಡಿದರು.

ಅಲ್ಲದೆ, ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ (ಜೆ ಎನ್.ಯು)ದಲ್ಲಿ ಕನ್ನಡ ಅಧ್ಯಯನ ಪೀಠದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು. ಮೈಸೂರು ಮಹಾರಾಣಿ ಆರ್ಟ್ಸ್‌ ಕಾಲೇಜು ಹಾಸ್ಟೆಲ್‌ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್‌ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್‌ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು.

ಅಲ್ಲದೇ, ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ದಸರಾ ಸಂದರ್ಭದಲ್ಲಿ ತಾವು ಸ್ವತಃ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು. ಈಗಾಗಲೇ ಇಲಾಖೆಯ ಬಳಿ 47 ಕೋಟಿ ರೂ. ಲಭ್ಯವಿದ್ದು, ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬಹುತೇಕ ಮಕ್ಕಳು ಬಡ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಇವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್‌ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್‌ ನಿರ್ಮಾಣಕ್ಕೆ ತಮ್ಮ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಿದ್ದನ್ನು ಸ್ಮರಿಸಿದರು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು. ವಿಶ್ವವಿದ್ಯಾಲಯಗಳು ವಿಭಜನೆಯಾಗಿರುವುದರಿಂದ ಹಳೆಯ 5 ವಿಶ್ವವಿದ್ಯಾಲಯಗಳ ಪಿಂಚಣಿ ವಿತರಣೆ ಸಮಸ್ಯೆ ಪರಿಹರಿಸಬೇಕು.

ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದೆ. ಇದನ್ನು ಸಚಿವ ಸಂಪುಟದ ಮುಂದೆ ತರುವಂತೆ ಸಿಎಂ ಸೂಚಿಸಿದರು. ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಮುಂಚಿತವಾಗಿಯೇ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್.ಎಂ.ಎಸ್) ಜಾರಿಗೆ ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ವಿತರಿಸುವುದು. ಪಿ.ಹೆಚ್‌.ಡಿ. ವಿದ್ಯಾರ್ಥಿಗಳಿಗೆ ಸ್ಟೈಫೆಂಡ್‌ ನೀಡುವ ಕುರಿತು ಚರ್ಚೆ ನಡೆಸಿದರು.

ABOUT THE AUTHOR

...view details