ಕರ್ನಾಟಕ

karnataka

ETV Bharat / state

ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ - Modi Guarantee

ಕಾಂಗ್ರೆಸ್​ ಗ್ಯಾರಂಟಿಗಳಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Etv Bharatcm-siddaramaiah-reaction-on-modi-guarantee
ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Jan 10, 2024, 10:04 PM IST

ಬೆಂಗಳೂರು: "ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, "ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ" ಎಂದರು.

ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು: "ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೇ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು. ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ" ಎಂದು ತಿಳಿಸಿದರು.

"ಗ್ಯಾರಂಟಿ ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಷಾ ಅವರನ್ನು ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು ಎರಡು ಸಾವಿರ ರೂ ವರೆಗೆ ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಪ್ರಾರಂಭಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ ಕಳುಹಿಸಿಕೊಟ್ಟು ಇದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು" ಎಂದು ಹೇಳಿದರು.

ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿದ್ದರು: "ಬಿಜೆಪಿ ಯವರು ನೀರಾವರಿ ಇಲಾಖೆಯೊಂದರಲ್ಲೇ 13,000 ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ, ಸಣ್ಣನೀರಾವರಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ. ಬೆಂಗಳೂರು ನಗರದಲ್ಲೇ 5000 ಕೋಟಿ ಬಿಲ್ ಬಾಕಿ ಇದೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಎಕ್ಕುಡಿಸಿ ಹೋಗಿದ್ದಾರೆ" ಎಂದು ಆರೋಪಿಸಿದರು.

"ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ. ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ" ಎಂದು ಕಾರ್ಯಕರ್ತರಿಗೆ ಮುಖ್ಯಮಂತ್ರಿಗಳು ಕೈ ಮುಗಿದು ಕರೆ ನೀಡಿದರು.

ಇದನ್ನೂ ಓದಿ:ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು: ಬಿಜೆಪಿ ನಾಯಕರಿಂದ ವಾಗ್ದಾಳಿ

ABOUT THE AUTHOR

...view details