ಬೆಂಗಳೂರು:ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ವೀರಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಯಂತೆ 50 ಲಕ್ಷ ರೂಪಾಯಿಗಳ ಪರಿಹಾರ ಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಸಿಎಂ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ.
ನ. 22ರಂದು ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್‌ನ 29 ವರ್ಷದ ಕರುನಾಡ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ದೇಶಕ್ಕಾಗಿ ಕ್ಯಾಪ್ಟನ್ ಪ್ರಾಂಜಲ್ ಪ್ರಾಣತ್ಯಾಗಕ್ಕೆ ಗೌರವಾರ್ಥವಾಗಿ ಅವರ ಕುಟುಂಬಕ್ಕೆ ರಾಜ್ಯ ಸರಕಾರದಿಂದ 50 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದರು. ಅದರಂತೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾ.ಪ್ರಾಂಜಲ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸುವ ಸಂದರ್ಭದಲ್ಲಿ ಅವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ದೇಶಕ್ಕಾಗಿ ಪ್ರಾಣವನ್ನು ಲೆಕ್ಕಿಸದೇ ಉಗ್ರಗಾಮಿಗಳ ಜೊತೆ ಹೋರಾಡಿ ಬಲಿಯಾದ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿಗಳ ಧನಸಹಾಯ ಮಾಡುವುದಾಗಿ ಪ್ರಕಟಿಸಿದ್ದರು. ಮುಖ್ಯಮಂತ್ರಿಗಳ ಆದೇಶದಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ 50 ಲಕ್ಷ ರೂಪಾಯಿಗಳ ಪರಿಹಾರ ಧನದ ಚಕ್ ಸಿದ್ಧಪಡಿಸಿದ್ದು, ಇಂದು ಮಂಗಳವರ ಪ್ರಾಂಜಲ್ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಿದೆ.