ಬೆಂಗಳೂರು/ದೆಹಲಿ: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಕ್ಕೆ ನಾವು ಸುಪ್ರೀಂ ಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಯಿತು. ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಸಂಜೆ ಸಭೆ ನಡೆಸುತ್ತಿದ್ದೇವೆ ಎಂದರು.
ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ. ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವರ ಸಭೆ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ನಿರ್ಮಲಾ ಸೀತಾರಾಮನ್ ಒಬ್ಬರನ್ನು ಹೊರತುಪಡಿಸಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರು, ಕೇಂದ್ರ ಸಚಿವರು ಸಭೆಯಲ್ಲಿ ಹಾಜರಿದ್ದರು. ನಿರ್ಮಲಾ ಸೀತಾರಾಮನ್ ಅವರು ಅನ್ಯಕಾರ್ಯ ನಿಮಿತ್ತ ಭಾಗವಹಿಸಲು ಸಾಧ್ಯವಾಗಿಲ್ಲ. ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ. 123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ. ವಾಡಿಕೆಗಿಂತ ಅತಿ ಕಡಿಮೆ ಮಳೆ ಸಂಕಷ್ಟ ಹೆಚ್ಚಲು ಕಾರಣ. 177.2 ಟಿಎಮ್ಸಿ ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ಬಿಡಬೇಕು ಎಂದು ಹೇಳಿದೆ. ಆದರೆ ಇಂಥ ಸಂಕಷ್ಟದ ಸಂದರ್ಭದಲ್ಲಿ ಎಷ್ಟು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆಯಾಗಿದೆ ಎಂದು ನುಡಿದರು.