ಬೆಂಗಳೂರು:ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಕಚೇರಿಯಲ್ಲಿರಬೇಕು, ಇಲ್ಲವೆ ಜಿಲ್ಲೆಯಲ್ಲಿ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳು ಸಾರ್ವಜನಿಕರು, ಶಾಸಕರು ಮತ್ತು ಸಚಿವರಿಂದ ಬಂದಿವೆ. ಇದು ಒಳ್ಳೆಯದಲ್ಲ. ಎಲ್ಲರ ಕರೆಗಳಿಗೆ ಸ್ಪಂದಿಸಬೇಕು. ಎಲ್ಲ ಪಕ್ಷಗಳ ಶಾಸಕರಿಗೆ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು. ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆತನದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದರು.
ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಿ:ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿವೆ. ಉಳಿದ ಪ್ರಕರಣಗಳನ್ನೂ ಶೀಘ್ರವೇ ವಿಲೇವಾರಿ ಮಾಡಿ, ಪರಿಹಾರ ವಿತರಿಸಬೇಕು. ಇದರಲ್ಲಿ ವಿಳಂಬ ಸರಿಯಲ್ಲ. ಬರ ಘೋಷಣೆಯಾದ ನಂತರ ಖಾಸಗಿ ಲೇವಾದೇವಿದಾರರ ಮೇಲೆ ನಿಗಾ ಇಡಬೇಕು. ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಅಧಿಕಾರಿಗಳಿಗೆ ಸೌಲಭ್ಯ ನೀಡುವುದು, ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮವಾಗಿ ಕೆಲಸ ಮಾಡಬೇಕೆಂಬ ಉದ್ದೇಶದಿಂದ. ನೀವು ಚೆನ್ನಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಕೆಲಸ ಮಾಡದಿದ್ದರೆ ಕೆಟ್ಟ ಹೆಸರು ಬರುತ್ತದೆ. ಅದಕ್ಕೋಸ್ಕರ ನಿಮ್ಮ ಧೋರಣೆಯನ್ನು ಬದಲಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧ ಪ್ರಿಸ್ಕ್ರಿಪ್ಷನ್ ಬರೆಯುವುದು ಇವೆಲ್ಲ ಆಗಬಾರದು. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎನ್ನುವ ಸೂಚನೆ ನೀಡಿದರು.
ಸಿಎಂ ನೀಡಿದ ಇತರೆ ಸೂಚನೆಗಳು:
- ಶಾಲಾ ಕಟ್ಟಡ, ಅಂಗನವಾಡಿ, ಆರೋಗ್ಯ ಕೇಂದ್ರ, ಸ್ಮಶಾನ ಮತ್ತು ಖಬರ್‌ಸ್ತಾನ್‌ಗಳಿಗೆ ಕೂಡಲೇ ಗುರುತಿಸಿ ಕೊಡಬೇಕು
- ಸಾರ್ವಜನಿಕರಿಗೆ ಭೇಟಿ ಸಮಯ ನಿಗದಿ ಮಾಡಬೇಕು. ಕೇಂದ್ರ ಕಚೇರಿಯಲ್ಲಿರುವಾಗ ಸಾರ್ವಜನಿಕರಿಗೆ ಸಮಯ ನಿಗದಿ ಮಾಡಬೇಕು. ಆ ಸಮಯದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೂಡಲೇ ಪರಿಹಾರ ಒದಗಿಸಬೇಕು
- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಸ್ಟೆಲ್, ಆಸ್ಪತ್ರೆಗಳಿಗೆ ಭೇಟಿ ನೀಡಬೇಕು. ಜಿಲ್ಲಾಧಿಕಾರಿಗಳು ಅಧೀನ ಕಚೇರಿಗಳಿಗೆ ಭೇಟಿ ನೀಡಬೇಕು
- ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ, ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು ಆರು ಜನ ಸತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು
- ಇತ್ತೀಚೆಗೆ ಡೆಂಗ್ಯೂ ಜ್ವರ ಜಾಸ್ತಿ ಆಗಿದೆ. ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4000ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟಲು ಒತ್ತು ನೀಡಬೇಕು
- ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು. ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು
- ಗೊಬ್ಬರವನ್ನು ಎಂ.ಆರ್.ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು
- ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಐದನೇ ಗ್ಯಾರಂಟಿಯನ್ನು ಮುಂದಿನ ವರ್ಷ ಜನವರಿಯಿಂದ ಪ್ರಾರಂಭ ಮಾಡಲು ಉದ್ದೇಶಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಹಣದ ತೊಂದರೆ ಇಲ್ಲ. ಇದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು
- ಅಧಿಕಾರಿಗಳಿಗೆ ಅನಗತ್ಯವಾಗಿ ಶಿಕ್ಷೆ ನೀಡುವುದಿಲ್ಲ. ಆದರೆ ತಪ್ಪು ಮಾಡಿದರೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು
- ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕೋಮುಶಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವ ಧರ್ಮದವರಿಗೂ ತೊಂದರೆಯಾಗಬಾರದು.
ಇದನ್ನೂ ಓದಿ:ಗ್ಯಾರಂಟಿ ಯೋಜನೆಗೆ 'SCSPTSP' ಅನುದಾನ ಬಳಕೆ: ಈವರೆಗೆ ಬಿಡುಗಡೆಯಾದ ಹಣ ಎಷ್ಟು?