ದಾವಣಗೆರೆ/ಬೆಳಗಾವಿ/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳನ್ನು ಪೂರೈಸಿದೆ. ಜನ ಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಸಂತೃಪ್ತಿಪಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹರಸಾಹಸ ಪಡುತ್ತಿದೆ. ಸರ್ಕಾರದ ಮೂರು ತಿಂಗಳ ಆಡಳಿತದ ಬಗ್ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಾವಣಗೆರೆ, ಬೆಳಗಾವಿ, ಬೆಂಗಳೂರು ಜನರು ಸಿದ್ದರಾಮಯ್ಯ ಸರ್ಕಾರದ ಆಡಳಿತ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೀಗೆ ವ್ಯಕ್ತಪಡಿಸಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿ ಫ್ರಾಂಕ್ಲಿನ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಮೂಲಕ ಹೆಣ್ಣುಮಕ್ಕಳಿಗೆ ಸ್ವಾಭಿಮಾನದ ಬದುಕನ್ನು ಬದುಕಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಇದರ ಜೊತೆಗೆ ಮಹಿಳೆಯರ ವೈದ್ಯಕೀಯ ಮತ್ತು ಶಿಕ್ಷಣದ ಕುರಿತು ಸರ್ಕಾರ ಗಮನಹರಿಸಬೇಕು. ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡುವ ಅಗತ್ಯತೆ ಇದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆ ಎಲ್ಲರಿಗೂ ಸಿಗುವಂತಾಗಬೇಕು. ಈ ಯೋಜನೆಗಳಲ್ಲಿನ ಕೆಲವು ಗೊಂದಲಗಳನ್ನು ಸರ್ಕಾರ ನಿವಾರಣೆ ಮಾಡಬೇಕು ಎಂದು ಹೇಳಿದರು. ಅನ್ನ ಭಾಗ್ಯ ಯೋಜನೆಯಲ್ಲಿ ಬ್ಯಾಂಕ್ ಖಾತೆಗಳನ್ನು ಲಿಂಕ್ ಮಾಡಲು ತಾಂತ್ರಿಕ ಸಮಸ್ಯೆಗಳಿಂದ ಆಗುತ್ತಿಲ್ಲ. ಇದನ್ನು ಸರಿಪಡಿಸಬೇಕು ಎಂದು ಹೇಳಿದರು.
ಲೇಬರ್ ಯೂನಿಯನ್ ಮುಖಂಡ ಗುರುಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ. ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳು ಸಂಪೂರ್ಣವಾಗಿ ತಲುಪದಿದ್ದರೂ, ಬೆಲೆ ಏರಿಕೆಯಿಂದ ಜನರು ಸ್ವಲ್ಪ ಚೇತರಿಸಿಕೊಳ್ಳಲು ಸಾಧ್ಯವಾಗಿದೆ ಎಂದರು. ಗೃಹಲಕ್ಷ್ಮಿ ಯೋಜನೆ ಉತ್ತಮವಾಗಿದ್ದರೂ, ಇದರ ಬದಲು ಉಚಿತ ಗ್ಯಾಸ್ ಸಿಲಿಂಡರ್ ನೀಡಿದ್ದರೆ ಮಹಿಳೆಯರಿಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.
ಉಳ್ಳಾಲದ ಸಾಮಾಜಿಕ ಕಾರ್ಯಕರ್ತೆ ವಿಜಯಲಕ್ಷ್ಮಿ ಪ್ರತಿಕ್ರಿಯಿಸಿ, ಎಲ್ಲರಿಗೂ ರೇಷನ್ ಕಾರ್ಡ್ ಮಾಡಿಸುವ ಮೂಲಕ ಸಮಾನವಾಗಿ ಯೋಜನೆಗಳು ತಲುಪುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಬೇಕು ಎಂದರು. ಹೋರಾಟಗಾರ ವಾಸು ಅವರಗೆರೆ ಮಾತನಾಡಿ, ಸರ್ಕಾರ ಶಾಸಕರಿಗೆ ತಮ್ಮ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಲು ಅನುದಾನ ನೀಡಬೇಕು. ಅನುದಾನ ಇಲ್ಲದಿರುವುದರಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ. ಸರ್ಕಾರ ಅನುದಾನಗಳನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.