ಕರ್ನಾಟಕ

karnataka

ETV Bharat / state

ನಾಳೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ; ಜನರ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ - ಈಟಿವಿ ಭಾರತ್ ಕನ್ನಡ ಸುದ್ದಿ

ಸಿಎಂ ಸಿದ್ದರಾಮಯ್ಯ ಅವರು ನಾಳೆ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Nov 26, 2023, 8:10 PM IST

ಬೆಂಗಳೂರು : ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.‌ ಬೆಳಗ್ಗೆ 9.30ಕ್ಕೆ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಈ ಜನತಾ ದರ್ಶನ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯ ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರ್​ಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್​ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ, ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸಲಿದ್ದಾರೆ.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ, ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಸಿಎಂ ಸೂಚನೆ : ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸಿದ್ದರಾಮಯ್ಯ ಈ ಸಂಬಂಧ ಸೂಚನೆ (ನವೆಂಬರ್ 24-2024) ನೀಡಿದ್ದರು.

ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದು ನಿಮಗೆ ತಿಳಿದಿದ್ದರೂ ಏನು ಪ್ರಯೋಜನ? ಎಂದು ಸಭೆಯಲ್ಲಿ ಗರಂ ಆಗಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎಂದು ಸೂಚಿಸಿದ್ದರು.

ಇದನ್ನೂ ಓದಿ:ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾ ದರ್ಶನ

ABOUT THE AUTHOR

...view details