ಬೆಂಗಳೂರು: ಸ್ವಿಟ್ಜರ್ಲೆಂಡ್ ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಇಂದು, ವಿವಿಧ ಕಂಪನಿಗಳ ಸಿಇಒಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಬಂಡವಾಳ ತೊಡಗಿಸುವಂತೆ ನೇರ ಆಹ್ವಾನ ನೀಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದಾವೋಸ್ನ ಕರ್ನಾಟಕ ಪೆವಿಲಿಯನ್ನಲ್ಲಿ ದಸ್ಸಾ ಸಿಸ್ಟಂನ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಫ್ಲಾರೆನ್ಸ್ ವರ್ಜಿನ್ ಅವರನ್ನ ಭೇಟಿ ಮಾಡಿ ಚರ್ಚಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಐ.ಟಿ/ ಬಿ.ಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಸಮ್ಮುಖದಲ್ಲಿ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನ ನೀಡಿ, ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.
