ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡರೇ, ಮತ್ತೊಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಕೋವಿಡ್ ದೃಢಪಟ್ಟ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಸಿಎಂಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿಗಳ ನಾಳಿನ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಿ ಸಿಎಂ ಕಚೇರಿ ಆದೇಶ ಹೊರಡಿಸಿದೆ. ಸೋಮವಾರ ಬೆಳಗ್ಗೆ ಶಿವಾಜಿನಗರದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದ ಸಿಎಂ ನಂತರ ಚಂದ್ರಶೇಖರ ಪಾಟೀಲ್ ಅವರ ಅಂತಿಮ ದರ್ಶನ ಪಡೆದುಕೊಳ್ಳಲು ತೆರಳಿದ್ದರು. ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಎರಡು ಸಭೆ ನಡೆಸಿದ್ದರು. ಈ ವೇಳೆ ಸಿಎಂ ಜೊತೆ ಸಂಪರ್ಕಕ್ಕೆ ಬಂದಿದ್ದ ಅಧಿಕಾರಿಗಳು ಹಾಗೂ ಸಚಿವರು ಕೋವಿಡ್ ಪಾಸಿಟಿವ್ ಭೀತಿಗೆ ಸಿಲುಕಿದ್ದಾರೆ.
ಇದನ್ನೂ ಓದಿ: ಇಲಾಖೆಗಳ ಕಾರ್ಯನಿರ್ವಹಣೆ ಬಗ್ಗೆ ಶ್ರೇಯಾಂಕ ನೀಡಲು ಮಾನದಂಡ ನಿಗದಿ: ಅಧಿಕಾರಿಗಳಿಗೆ ಸಿಎಂ ಸೂಚನೆ