ಬೆಂಗಳೂರು:ಶಿವಮೊಗ್ಗ ಕಲ್ಲು ಕ್ವಾರಿ ಸ್ಫೋಟ ಪ್ರಕರಣದ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಕೂಡ ಅಲ್ಲಿಗೆ ಹೋಗುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ದಳವನ್ನು ಕಳುಹಿಸಿಕೊಡಲಾಗಿದೆ. ತನಿಖೆಯಾದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.
ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ನಮ್ಮ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು ತನಿಖೆ ಮಾಡುತ್ತಿದ್ದಾರೆ ಎಂದರು. ಈಗಾಗಲೇ ನಾಲ್ಕಾರು ಕಡೆ ಅಕ್ರಮ ಗಣಿಗಾರಿಕೆಯ ನಿಲ್ಲಿಸಲಾಗಿದೆ. ಎಲ್ಲೆಲ್ಲಿ ಈ ರೀತಿಯ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆಯೋ ತಡೆಯಲು ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ, ಈ ತರಹದ ದುರ್ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ತನಿಖೆಯಾಗಿ ವರದಿ ಬರಲಿ ನಂತರ ತಪ್ಪಿತಸ್ಥರು ಯಾರದೇನು? ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಕ್ವಾರಿ ಲೀಸ್ ಪಡೆದಿದ್ದ ಸುಧಾಕರ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದರು.
ನಾಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಗೂಳಿಯ ಓಟಕ್ಕೆ ಕರಡಿ ಬ್ರೇಕ್: 152 ಅಂಕ ಕುಸಿದ ಸೆನ್ಸೆಕ್ಸ್