ಬೆಂಗಳೂರು:ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ ಮೊದಲ ಬಾರಿ ಸಮಗ್ರ ತನಿಖೆ ಮಾಡುತ್ತಿದ್ದೇವೆ. ಈಗಾಗಲೇ ಕೆಲವರ ಬಣ್ಣ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಹಿಂದಿನ ಸರ್ಕಾರಗಳು ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಕೈಕಟ್ಟಿ ಕುಳಿತಿದ್ದವು. ಆದರೆ ಈ ಬಾರಿ ನಾವು ಡ್ರಗ್ಸ್ ದಂಧೆ ಪ್ರಕರಣ ಕುರಿತು ಸಮಗ್ರವಾಗಿ ತನಿಖೆ ಮಾಡಿಸುತ್ತಿದ್ದೇವೆ. ಇದರಿಂದಾಗಿ ಅನೇಕ ಜನರ ಬಣ್ಣ ಬಯಲಾಗುತ್ತಿದೆ. ಈ ಪ್ರಕರಣದಲ್ಲಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಹಾಗೂ ಮಳೆ ಹಾನಿ ಬಗ್ಗೆ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತದ ಜೊತೆ ಚರ್ಚೆ ನಡೆಸಿದ್ದೇನೆ. ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 10 ರಿಂದ 30 ಕೋಟಿ ರೂ. ಹಣ ಇದೆ. ಹಣದ ಕೊರತೆ ಇಲ್ಲ ಎನ್ನುವುದು ಸಮಾಧಾನದ ಸಂಗತಿ. ಜಿಲ್ಲೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಕೊರತೆಯಿಲ್ಲದಿರುವುದು ಕೂಡ ಸಮಾಧಾನದ ವಿಷಯ. ಆಕ್ಸಿಜನ್ ಕೊರತೆ ಇದ್ದರೆ ತಿಳಿಸುವಂತೆ ಮತ್ತು ಸೋಂಕು ಹರಡುವ ಪ್ರದೇಶಗಳನ್ನು ಗುರುತಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.