ಬೆಂಗಳೂರು:ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಮತ್ತೊಮ್ಮೆ ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡುತ್ತಿದ್ದಾರೆ. ಮೂರು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಧ್ಯಾಹ್ನ 2.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 3.40ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ತೆರಳುತ್ತಿದ್ದು, ಸಂಜೆ 4 ಗಂಟೆಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಪ್ರವಾಹ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ರಾತ್ರಿ ಬೆಳಗಾವಿ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಅಕ್ಟೋಬರ್ 4 ರಂದು ಬೆಳಗ್ಗೆ 9.30ಕ್ಕೆ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಅಹವಾಲು ಆಲಿಸಲಿರುವ ಸಿಎಂ, 10.30ಕ್ಕೆ ಅಥಣಿ ತಾಲೂಕು ಮತ್ತು ಇತರ ಪ್ರದೇಶಗಳ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಹಾಗು ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ. ಸಂಜೆ 4.30ಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 7.15ಕ್ಕೆ ಬಾಗಲಕೋಟೆಗೆ ತೆರಳಲಿದ್ದು ಆಲಮಟ್ಟಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.