ಬೆಂಗಳೂರು: ಅತಿವೃಷ್ಠಿ ಹಾಗೂ ಅನಾವೃಷ್ಠಿ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ನೆರೆ ಪರಿಹಾರ ಕಾಮಗಾರಿ, ಒಟ್ಟು ನಷ್ಟ, ಹಾನಿ, ಬರ ನಿರ್ವಹಣೆ ಸಂಬಂಧ ಪ್ರಮುಖ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು. ಬರ ಪೀಡಿತ ಪ್ರದೇಶಗಳಿಗೆ ಎರಡು ಬಾರಿ ಭೇಟಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು. ಮುಖ್ಯ ಕಾರ್ಯದರ್ಶಿಗಳು ತಿಂಗಳಿಗೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಿಗೆ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸ್ಥಳ ಪರಿಶೀಲನೆ ನಡೆಸಲು ಸೂಚಿಸಿದ್ದರು.
ನೆರೆ ಪೀಡಿತ ಪ್ರದೇಶಗಳಲ್ಲಿನ ಪರಿಹಾರ ಕಾಮಗಾರಿಗಳು, ಪರಿಹಾರ ಕೇಂದ್ರಗಳ ನಿರ್ವಹಣೆ, ಗೋಶಾಲೆಗಳ ಸ್ಥಾಪನೆ, ಪ್ರವಾಹ ಪರಿಸ್ಥಿತಿ, ಬೆಳೆ ಹಾನಿ ಸಂಬಂಧ ಚರ್ಚೆ ನಡೆಸಿದರು. ನೆರೆ ಸಂತ್ರಸ್ತರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇನ್ನು ಬರ ಪೀಡಿತ ಜಿಲ್ಲೆಗಳಲ್ಲೂ ಸಾರ್ವಜನಿಕರ ಕುಂದು ಕೊರತೆಯನ್ನು ನೀಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೇವು ಸಂಗ್ರಹ, ಕುಡಿಯುವ ನೀರಿನ ಸ್ಥಿತಿಗತಿ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು.
ಪ್ರಮುಖವಾಗಿ ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ, ಕೃಷಿ, ಗ್ರಾಮೀಣಾಭಿವೃದ್ಧಿ, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಉಳಿದಂತೆ ಸಿಎಂ ಕಾರ್ಯದರ್ಶಿ ಶಿವಯೋಗಿ ಕಳಸದ್, ಶಾಲಿನಿ ರಜನೀಶ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.