ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾದ ಬೆನ್ನಲ್ಲೇ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಉಸ್ತುವಾರಿ ಸಚಿವ ಡಿಸಿಎಂ ಅಶ್ವತ್ಥ ನಾರಾಯಣ, ಸಚಿವ ಆರ್. ಅಶೋಕ, ಡಾ.ಸುಧಾಕರ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋವಿಡ್ ನಿರ್ವಹಣೆಯಲ್ಲಿ ಸಕಾರಾತ್ಮಕ ಫಲಿತಾಂಶ ಬಂದಿದ್ದು, ಪಾಸಿಟಿವಿಟಿ ದರ ಶೇ 5ಕ್ಕಿಂತ ಕೆಳಗೆ ಕುಸಿದಿದೆ,. ಮರಣ ಪ್ರಮಾಣ ಹೆಚ್ಚಾಗಿದ್ದರೂ ಸದ್ಯ ಕೋವಿಡ್ ನಿಯಂತ್ರಣದಲ್ಲಿದೆ. ಆದರೆ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು, ಈ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ, ಬೆಂಗಳೂರಿನ ವ್ಯಕ್ತಿಯೊಬ್ಬರಲ್ಲೂ ಡೆಲ್ಟಾ ಪ್ಲಸ್ ಇರುವ ಅನುಮಾನ ವ್ಯಕ್ತವಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.