ಬೆಂಗಳೂರು:ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಬಿಎಂಪಿ ಗುತ್ತಿಗೆದಾರರ ಸಂಘ, ಇದೀಗ ಕಾಂಗ್ರೆಸ್ ವರಿಷ್ಠರಿಗೆ ಆರೋಪದ ಬಗ್ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದೆ. ಕಾಮಗಾರಿ ಬಿಲ್ ವಿಳಂಬದ ಬಗ್ಗೆ ಸರ್ಕಾರದ ವಿರುದ್ಧ ಸಮರ ಸಾರಿದೆ.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಡಿಸಿಎಂ ಡಿಕೆಶಿ ಸೇರಿದಂತೆ ಕೆಲ ಸಚಿವರ ವಿರುದ್ಧ ಕಮಿಷನ್ ಆರೋಪದ ವಿವರಣೆಯೊಂದಿಗೆ ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದೆ. ಆ ಮೂಲಕ ಕಾಂಗ್ರೆಸ್ ಹೈ ಕಮಾಂಡ್ಗೆ ಸರ್ಕಾರದ ವಿರುದ್ಧ ಗಮನ ಸೆಳೆಯಲು ಯತ್ನಿಸಿದೆ.
'Savebbmpcontractors' ಹ್ಯಾಷ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಬಿಬಿಎಂಪಿ ಗುತ್ತಿಗೆದಾರರು, ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರು ಮಾಡಿದ್ದ 40ರಷ್ಟು ಭ್ರಷ್ಟಾಚಾರ ಆರೋಪವನ್ನು ಬಳಸಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರವೂ ಅದೇ ಭ್ರಷ್ಟಾಚಾರದ ಹಾದಿಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದೆ.
ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಕಾಮಗಾರಿಯ ಬಾಕಿ ಬಿಲ್ ಹಣ ಬಿಡುಗಡೆಗೆ 10-15% ಕಮಿಷನ್ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ವಿರುದ್ಧದ ಸಾರ್ವಜನಿಕ ಆಕ್ರೋಶದ ಅಲೆಯ ಮೇಲೆ ಅಧಿಕಾರಕ್ಕೆ ಬಂದಿದೆ. ಆದರೆ, ಪಕ್ಷದ ಕೆಲ ಸದಸ್ಯರು ಬಾಕಿ ಬಿಲ್ ಹಣ ಬಿಡುಗಡೆಗೆ ಕಮಿಷನ್ ಕೇಳುತ್ತಿರುವುದು ಬೇಸರದ ಸಂಗತಿಯಾಗಿದೆ. ಈ ಸಂಬಂಧ ತಾವುಗಳು ಆದಷ್ಟು ಬೇಗ ಮಧ್ಯಪ್ರವೇಶಿಸಿ ಸಂಕಷ್ಟದಲ್ಲಿರುವ ಗುತ್ತಿಗೆದಾರರ ನೆರವಿಗೆ ಬರಬೇಕು ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮನವಿ ಮಾಡಿದ್ದಾರೆ.