ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಸಾವನ್ನಪ್ಪಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬದ ಸದಸ್ಯರಿಗೆ 30 ಲಕ್ಷ ರೂ ಪರಿಹಾರ ಒದಗಿಸುವ ಕುರಿತಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ತಹೇರ್ ಹುಸೈನ್ ಮತ್ತು ಅಜೀಜ್ ಪಾಷಾ ಜಾಗೀರದಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ನಿಗಮ(ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಮತ್ತು ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಮನವಿಯೇನು?:ಕೊರೊನಾದಿಂದ ಸಾರಿಗೆ ನೌಕರರು ಸಾವನ್ನಪ್ಪಿದ್ದರೆ, ಅವರ ಕುಟುಂಬಕ್ಕೆ 30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆ.10ರಂದು ಸುತ್ತೋಲೆ ಹೊರಡಿಸಿತ್ತು. ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ, 2020ರ ಮಾರ್ಚ್‌ನಿಂದ 2021ರ ಜೂನ್‌ವರೆಗೆ ಕೋವಿಡ್‌ನಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಅದರಲ್ಲಿ ಕೇವಲ 11 ನೌಕರರ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.