ಬೆಂಗಳೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ. ಅಷ್ಟೇ ಅಲ್ಲ, ಸದ್ಯ ಮಹಿಳೆಯರ ಭಾಗವಹಿಸುವಿಕೆ ಶೇ.51ರಷ್ಟಿದ್ದು, ಇದನ್ನು ಶೇ.60 ಕ್ಕೆ ಹೆಚ್ಚಿಸುವ ಗುರಿ ಇದೆ. ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗಿದೆ.
ಇದನ್ನೂ ಓದಿ:ನರೇಗಾ: ಕೂಲಿ ಕಾರ್ಮಿಕರಿಗೆ ಸಿಗದ ಸಂಬಳ-ಗುಳೆ ಹೋಗುವ ಪರಿಸ್ಥಿತಿ
ನರೇಗಾ ಕಾಮಗಾರಿಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ಅವರ ದೈಹಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸ ನಿರ್ವಹಿಸುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಸಿಕ್ಕಿದೆ. ಈ ರಿಯಾಯಿತಿ ನೀಡಲು ಆರೋಗ್ಯ ಇಲಾಖೆ ನೀಡುವ ತಾಯಿ ಕಾರ್ಡ್ ಆಧಾರವಾಗಿ ಪರಿಗಣಿಸಲು ತಿಳಿಸಲಾಗಿದೆ.
ಇದನ್ನೂ ಓದಿ:ಗಂಗಾವತಿ: ನರೇಗಾಗೆ ಪ್ರೋತ್ಸಾಹ; ಕಾರ್ಮಿಕರೊಂದಿಗೆ ನೃತ್ಯ ಮಾಡಿದ ಪಿಡಿಒ