ಬೆಂಗಳೂರು:ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದೊಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ರಾಮಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ (ಪಿಎಂಎಲ್ಎ) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಆರೋಪಿ ಬಿನೀಶ್ ಕೊಡಿಯೇರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಮ್ ಜಿ ಉಮಾ ಅವರಿದ್ದ ಪೀಠ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿ ಹೊರಡಿಸಿದೆ. ಬಿನೀಶ್ ಕೊಡಿಯೇರಿಯನ್ನು 2020ರ ಅಕ್ಟೋಬರ್ 29ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣವೇನು?:
ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತನಾಗಿರುವ ಮಹಮ್ಮದ್ ಅನೂಪ್ ಜತೆ ಹಣಕಾಸು ವಹಿವಾಟು ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್ಸಿಬಿ ಅಧಿಕಾರಿಗಳು ಬಿನೀಶ್ ಕೊಡಿಯೇರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.