ಬೆಂಗಳೂರು :ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕಾಗಿ 2022ರ ಆಗಸ್ಟ್‌ನಲ್ಲಿ ಸಲ್ಲಿಸಿರುವ ಮನವಿಯನ್ನು ಶೀಘ್ರದಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೇಂದ್ರೀಯ ತನಿಖಾ ದಳ(ಸಿಬಿಐ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.
ಹೈಕೋರ್ಟ್ ಮೊರೆ ಹೋದ ಸಿಬಿಐ :ರೆಡ್ಡಿ ಮತ್ತವರ ಕುಟುಂಬಸ್ಥರು ಆಂದ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಅಕ್ರಮವಾಗಿ ಗಳಿಸಿರುವ ಆಸ್ತಿಗಳನ್ನು ಕ್ರಿಮಿನಲ್ ಕಾನೂನುಗಳ(ತಿದ್ದುಪಡಿ)ಸುಗ್ರೀವಾಜ್ಞೆ ಕಾಯ್ದೆ 1994ರ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ಸಂಬಂಧ ವಿಶೇಷ ನ್ಯಾಯಾಲಯದಲ್ಲಿ ಮನವಿ ಮಾಡಬೇಕಾಗಿದೆ. ಆದ್ದರಿಂದ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸಲು ಅನುಮತಿ ನೀಡುವಂತೆ 2022ರ ಆಗಸ್ಟ್ 30ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಶೀಘ್ರದಲ್ಲಿ ಪರಿಗಣಿಸಲು ಸೂಚನೆ ನೀಡಬೇಕು ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಕೋರಿದೆ.
ಸುಮಾರು 19.14 ಕೋಟಿ ಮೌಲ್ಯದ ಆಸ್ತಿಗಳನ್ನು ಅಕ್ರಮ ಎಂದು ಗುರುತಿಸಲಾಗಿದೆ. ಈ ಆಸ್ತಿಗಳನ್ನು ಮಾರಾಟ ಮಾಡುವುದಕ್ಕಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ನಮ್ಮ ಮನವಿಯನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದೆ. ಅಲ್ಲದೆ, ಈ ರೀತಿಯ ಆಸ್ತಿಗಳನ್ನು ಪರಭಾರೆಯಾದಲ್ಲಿ ನೋಂದಾಯಿಸದಂತೆ ತೆಲಂಗಾಣ ಮತ್ತು ಆಂದ್ರಪ್ರದೇಶದ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದೆ.