ಬೆಂಗಳೂರು: ರಾಜ್ಯದ ಗಮನ ಸೆಳೆದಿದ್ದ ಶಿವಾಜಿನಗರ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ನ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ನ ಅಭ್ಯರ್ಥಿ ರಿಜ್ವಾನ್ ಅರ್ಷದ್ ಜಿದ್ದಾಜಿದ್ದಿ ಕದನದಲ್ಲಿ ಬಿಜೆಪಿ ಅಭ್ಯರ್ಥಿ ಎಂ ಶರವಣ ಅವರನ್ನು ಸೋಲಿಸಿ ಸುಮಾರು 14 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವಿನ ಮಾಲೆ ಧರಿಸಿದ್ದಾರೆ. ಏಳು ಸುತ್ತು ಮತಎಣಿಕೆ ಮುಗಿಯುತ್ತಿದ್ದಂತೆಯೇ ಮತ ಎಣಿಕೆ ಕೇಂದ್ರದ ಬಳಿ ವಿಜಯೋತ್ಸವ ಆಚರಿಸಲು ಶುರು ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ರಿಜ್ವಾನ್ ಅರ್ಷದ್ ಅವರ ಮೆರವಣಿಗೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.
ಕುಟುಂಬ ಸಮೇತರಾಗಿ ಮತ ಎಣಿಕೆ ಕೇಂದ್ರಕ್ಕೆ ಬಂದು ರಿಜ್ವಾನ್ ಕುಟುಂಬ ಗೆಲುವಿನ ಸಂಭ್ರಮ ಆಚರಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಿಜ್ವಾನ್ ಅರ್ಷದ್ ಶಿವಾಜಿನಗರದಲ್ಲಿ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯವಾಗಿಲ್ಲ. 20 ವರ್ಷಗಳಿಂದಲೂ ಶಿವಾಜಿನಗರದ ಕೂಗು ವಿಧಾನಸೌಧದಲ್ಲಿ ಕೇಳಿಸಿಲ್ಲ. ನಾನು ಇನ್ಮುಂದೆ ಈ ಕ್ಷೇತ್ರದ ಮತದಾರರ ಮನೆ ಮಗನಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಇನ್ನು, ಶಿವಾಜಿನಗರ ಕ್ಷೇತ್ರದಿಂದ ತನಗೆ ಟಿಕೆಟ್ ಕೊಟ್ಟು ಚುನಾವಣೆಯಲ್ಲಿ ಗೆಲ್ಲಿಸಿದ್ದಕ್ಕೆ ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ರಿಜ್ವಾನ್ ಹೇಳಿದ್ರು.