ಬೆಂಗಳೂರು: ಮೋದಿ ಉಪನಾಮ ಕುರಿತು ವಿವಾದಾತ್ಮಕ ಹೇಳಿಕೆ ಕುರಿತಾದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾಗಿದೆ. ಅಲ್ಲದೆ, ಲೋಕಸಭೆಯ ಸಂಸದ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ನಿಂದ ಇಂದು ಮೌನ ಸತ್ಯಾಗ್ರಹ ನಡೆಯುತ್ತಿದೆ.
ಪಕ್ಷದಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಮೌನ ಸತ್ಯಾಗ್ರಹ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಪಾಲ್ಗೊಂಡರು. ರಾಹುಲ್ ಅರ್ಜಿ ವಜಾದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿದೆ. "ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ. ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು. ಕುತಂತ್ರಿ ಬಿಜೆಪಿಗೆ ಧಿಕ್ಕಾರ. ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ" ಎಂಬಿತ್ಯಾದಿ ಭಿತ್ತಿ ಪತ್ರಗಳನ್ನ ಹಿಡಿದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮಂತ್ರಿಗಳಾದ ಕೆ.ಹೆಚ್ ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ವ್ಯಕ್ತಪಡಿಸಿದರು.
ಹುಬ್ಬಳ್ಳಿ, ಕಾರವಾರದಲ್ಲಿಯೂ ಮೌನ ಪ್ರತಿಭಟನೆ:ಲೋಕಸಭೆಯ ಸಂಸದ ಸ್ಥಾನದಿಂದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ನಿಂದ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯ ಮುಖ್ಯದ್ವಾರದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಸಾಬೀತುಪಡಿಸಲು ಹಾಗೂ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ಮಾಡಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲ ಕುಮಾರ್ ಪಾಟೀಲ್, ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ಸದಾನಂದ ಡಂಗಣವರ, ಡಾ. ಶರಣಪ್ಪ ಕೊಟಗಿ, ಎ.ಎಂ.ಹಿಂಡಸಗೇರಿ, ಸತೀಶ್ ಮೆಹರವಾಡೆ, ರಾಜಶೇಖರ ಮೆಣಸಿನಕಾಯಿ, ಬಂಗಾರೇಶ್ ಹಿರೇಮಠ ಸೇರಿದಂತೆ ಮುಖಂಡರು ಭಾಗಿಯಾಗಿದ್ದರು.
ಕಾರವಾರದಲ್ಲಿ ಬಾಯಿಗೆ ಕಪ್ಪು ಪಟ್ಟಿ ಕಟ್ಟಿ ಪ್ರತಿಭಟನೆ:ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸುವಲ್ಲಿ ಬಿಜೆಪಿ ಕುತಂತ್ರ ನಡೆಸಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಕಾರವಾರದಲ್ಲಿಯೂ ಮೌನ ಪ್ರತಿಭಟನೆ ನಡೆಸಿದರು. ನಗರಸಭೆಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಸೇರಿದ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಬಾಯಿಗೆ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅವರ ಅನರ್ಹತೆ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದ್ದು, ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ. ಅಲ್ಲಿ ಅವರಿಗೆ ನ್ಯಾಯ ಸಿಗುವ ವಿಶ್ವಾಸ ಇದೆ. ಆದರೆ ಬಿಜೆಪಿಯವರು ಅವರನ್ನು ಅವಮಾನಿಸುತ್ತಿದ್ದಾರೆ. ಈ ರೀತಿ ದ್ವೇಶ ರಾಜಕಾರಣವನ್ನು ಕಾರವಾರದ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಅಲ್ಲದೆ ಮುಂದೆ ರಾಹುಲ್ ಗಾಂಧಿಯೇ ಪ್ರಧಾನಿಯೂ ಆಗಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ್ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು.
ಹಾವೇರಿಯಲ್ಲಿ ಮೌನ ಪ್ರತಿಭಟನೆ:ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಹಾವೇರಿಯ ಮೈಲಾರ ಮಹದೇವಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ಸೇಡಿನ ಕ್ರಮ ಕೈಗೊಳ್ಳುತ್ತಿದೆ. ರಾಹುಲ್ ಗಾಂಧಿ ದೋಷಿ ಎಂದು ಸಾಬೀತುಪಡಿಸಲು ಅಲ್ಲದೇ ಅವರನ್ನ ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವ ಎಲ್ಲ ಕ್ರಮಗಳನ್ನ ಬಿಜೆಪಿ ಅನುಸರಿಸುತ್ತಿದೆ.