ಬೆಂಗಳೂರು:ದುಡ್ಡು ಹಂಚೋ ಮೂಲಕ ಡಿಸಿಎಂ ಗೋವಿಂದ ಕಾರಜೋಳ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರ ನಿಯೋಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ಗೆ ದೂರು ಸಲ್ಲಿಸಿತು. ಅಥಣಿಯಲ್ಲಿ ಮತದಾರರಿಗೆ ಡಿಸಿಎಂ ಕಾರಜೋಳ ದುಡ್ಡು ಹಂಚುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ದಾಖಲೆ ಸಮೇತ ದೂರು ಸಲ್ಲಿಕೆ ಮಾಡಲಾಯಿತು.
ದೂರು ಸಲ್ಲಿಸಿದ ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಡಿಸಿಎಂ ಗೋವಿಂದ ಕಾರಜೋಳ ಅವರು ಅಥಣಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ನೀಡಿ ಆಮಿಷ ಒಡ್ಡಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಜೊತೆಗೆ ಈಗಿನಿಂದಲೇ ಅವರಿಗೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನೋಟಿಸ್ ನೀಡಬೇಕು ಎಂದು ಮನವಿ ಮಾಡಿದ್ದೇವೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮಂತ್ರಿಗಳು, ನಾಯರು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ. ಮುಂದಾದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದೇವೆ ಎಂದರು.