ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ರಾಜ್ಯದಲ್ಲಿ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್ ಆರ್ ಪಾಟೀಲ್ ಟ್ವೀಟ್ ಮಾಡಿದ್ದು, ಅಪ್ಪ, ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎಂಬಂತಾಗಿದೆ ಜನ ಸಾಮಾನ್ಯರ ಸ್ಥಿತಿ.
ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆಯುತ್ತಿದೆ. ಇಬ್ಬರ ಈ ಜಗಳದಲ್ಲಿ ಶ್ರೀಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ.
ದೂರದ ಊರುಗಳಿಗೆ ತೆರಳಲಾಗದೆ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಕೂಡಲೇ ರಾಜ್ಯ ಸರ್ಕಾರ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದಿದ್ದಾರೆ.
ಓದಿ: ಮುಂದುವರೆದ ಸಾರಿಗೆ ನೌಕರರ ಮುಷ್ಕರ ; ಖಾಸಗಿ ಚಾಲಕ-ನಿರ್ವಾಹಕರ ಮೊರೆ ಹೋಗುತ್ತಾ ಸರ್ಕಾರ?
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಸಾರಿಗೆ ನೌಕರರ ಮುಷ್ಕರದಿಂದ ಲಕ್ಷಾಂತರ ಪ್ರಯಾಣಿಕರು ತೊಂದರೆಗೀಡಾಗಿದ್ದಾರೆ. ಮುಷ್ಕರ ನಿರತರ ಮೇಲೆ ಕಾನೂನಿನ ಅಸ್ತ್ರ ಪ್ರಯೋಗಿಸುವ ಸಾರಿಗೆ ಸಚಿವರ ಮಾತು ಪ್ರಬುದ್ಧ ನಡೆಯಲ್ಲ. ಸರ್ಕಾರ ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕೆಂಬ ಸರ್ವಾಧಿಕಾರಿ ಧೋರಣೆ ಬಿಟ್ಟು ಸಮಸ್ಯೆ ಬಗೆಹರಿಸುವತ್ತ ಚಿತ್ತ ಹರಿಸಲಿ ಎಂದಿದ್ದಾರೆ.
ಈಗಾಗಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರದ ಕ್ರಮ ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ರಾಜ್ಯ ಕಾಂಗ್ರೆಸ್ ನಾಯಕರೆಲ್ಲ ಸರ್ಕಾರ ಸಾರಿಗೆ ನೌಕರರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.