ಬೆಂಗಳೂರು:ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಹೋದರ ಸಂಸದ ಡಿ. ಕೆ. ಸುರೇಶ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಡಿ ಕೆ ಸಹೋದರರ ಮನೆ ಮೇಲೆ ಸಿಬಿಐ ದಾಳಿ: ಕಾಂಗ್ರೆಸ್ ನಾಯಕರ ಆಕ್ರೋಶ - ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಸಹೋದರ ಡಿ.ಕೆ. ಸುರೇಶ್ ನಿವಾಸದ ಮೇಲೆ ದಾಳಿ ಕುರಿತಂತೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮೋದಿ-ಯಡಿಯೂರಪ್ಪ ಜೋಡಿಯ ಬೆದರಿಕೆ ಮತ್ತು ಕುತಂತ್ರಗಳ ಕಪಟ ಆಟಕ್ಕೆ ಬೊಂಬೆಯಾಗಿರುವ ಸಿಬಿಐ ಅಧಿಕಾರಿಗಳು ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಸಿಬಿಐ ಮೊದಲು ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಡಿ ಕೆ ಸಹೋದರರ ಮನೆ ಮೇಲಿನ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.